ವಿಜಯಸಾಕ್ಷಿ ಸುದ್ದಿ, ಧಾರವಾಡ: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜೂನ್ 27ರಂದು ನಾಡಪ್ರಭು ಶ್ರೀ ಕೆಂಪೇಗೌಡ ಮತ್ತು ಜುಲೈ 2ರಂದು ಡಾ. ಫ.ಗು. ಹಳಕಟ್ಟಿ ಅವರ ಜಯಂತಿಯನ್ನು ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಬೆಳಿಗ್ಗೆ 11 ಗಂಟೆಗೆ ಆಯೋಜಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ ಹೇಳಿದರು.
ಅವರು ಬುಧವಾರ ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಭವನದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಯಂತಿ ಕಾರ್ಯಕ್ರಮವನ್ನು ನಾವೆಲ್ಲರೂ ಪ್ರತಿವರ್ಷದಂತೆ ವಿಜೃಂಭಣೆಯಿಂದ ಆಚರಿಸೋಣ ಎಂದು ಹೇಳಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಸಮಾಜದ ಹಿರಿಯ ಮುಖಂಡರು ಹಾಗೂ ಸಾರ್ವಜನಿಕರು ಸಭೆಯಲ್ಲಿ ಉಪಸ್ಥಿತರಿದ್ದರು.



