ಬಾಗಲಕೋಟೆ: ರಾಜ್ಯ ಸರ್ಕಾರದ ಆಡಳಿತ ವೈಖರಿ, ಅಗತ್ಯ ವಸ್ತುಗಳ ಬೆಲೆ ಏರಿಕೆ, ಸಾಲದ ಹೊರೆ ಹಾಗೂ ಎಥೆನಾಲ್ ಮಿಶ್ರಣದ ವಿಚಾರವಾಗಿ ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರಗೇಶ್ ನಿರಾಣಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಎಥೆನಾಲ್ ಮಿಶ್ರಣದ ಕುರಿತು ಸಚಿವ ರಿಜ್ವಾನ್ ಅರ್ಷದ್ ನೀಡಿರುವ ಹೇಳಿಕೆಯಲ್ಲಿ ಯಾವುದೇ ಹುರುಳಿಲ್ಲ ಎಂದು ಹೇಳಿರುವ ಅವರು, ಸಚಿವರಿಗೆ ನೇರ ಸವಾಲು ಹಾಕಿದ್ದಾರೆ.
ಎಥೆನಾಲ್ ಮಿಶ್ರಣದ ವಿಚಾರದಲ್ಲಿ ಜನರ ದಿಕ್ಕು ತಪ್ಪಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದ ನಿರಾಣಿ, ಇ20 (E20) ವಾಹನಗಳಿಗೆ ಶೇ.20ರಷ್ಟು ಮಾತ್ರ ಎಥೆನಾಲ್ ಮಿಶ್ರಣ ಮಾಡಲಾಗುತ್ತದೆ ಎಂದು ಸ್ಪಷ್ಟಪಡಿಸಿದರು. ಈ ಕುರಿತು ಸರ್ಕಾರ ಸಮಿತಿಯೊಂದನ್ನು ರಚಿಸಲಿ. ಸಚಿವರು ಉಲ್ಲೇಖಿಸಿರುವ ಪೆಟ್ರೋಲ್ ಬಂಕ್ನಲ್ಲಿಯೇ ಮಾಧ್ಯಮಗಳ ಸಮ್ಮುಖದಲ್ಲಿ ಸ್ಯಾಂಪಲ್ ಪರೀಕ್ಷೆ ನಡೆಸೋಣ ಎಂದು ಸವಾಲು ಹಾಕಿದರು.
ಕಬ್ಬು, ಮೆಕ್ಕೆಜೋಳ ಹಾಗೂ ಜೋಳದಿಂದ ಎಥೆನಾಲ್ ಉತ್ಪಾದಿಸಲಾಗುತ್ತದೆ. ದೇಶದಲ್ಲಿಯೇ ಅತಿ ಹೆಚ್ಚು ಎಥೆನಾಲ್ ಉತ್ಪಾದಿಸುವ ಸಾಮರ್ಥ್ಯ ನಮ್ಮಲ್ಲಿದೆ. ಆದರೆ ಬರಗಾಲದ ಹಿನ್ನೆಲೆಯಲ್ಲಿ ಈ ವರ್ಷ ಕಬ್ಬಿನ ಉತ್ಪಾದನೆ ಅಂದಾಜು ಶೇ.20ರಷ್ಟು ಕಡಿಮೆಯಾಗಿದ್ದು, ಸಕ್ಕರೆ ಉತ್ಪಾದನೆಯೂ ಇಳಿಕೆಯಾಗಿದೆ ಎಂದು ತಿಳಿಸಿದರು. ಸಾಂದ್ರತೆಯ ವ್ಯತ್ಯಾಸದಿಂದ ಎಥೆನಾಲ್ ಅನ್ನು ಪೆಟ್ರೋಲ್ನಲ್ಲಿ ಮಾತ್ರ ಮಿಶ್ರಣ ಮಾಡಲಾಗುತ್ತದೆ. ಡೀಸೆಲ್ನಲ್ಲಿ ಮಿಶ್ರಣ ಮಾಡಲು ಐಸೋ ಬ್ಯುಟನಾಲ್ ಕುರಿತು ಸಂಶೋಧನೆ ನಡೆಯುತ್ತಿದೆ ಎಂದರು.
ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ಕಾಂಗ್ರೆಸ್ ನಾಯಕರ ಹೇಳಿಕೆಗಳಿಗೂ ಪ್ರತಿಕ್ರಿಯಿಸಿದ ಅವರು, ಮತದಾರರ ಪಟ್ಟಿಯಲ್ಲಿ ಯಾವುದೇ ಸಂಶಯಗಳಿದ್ದರೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಅದನ್ನು ಬಿಟ್ಟು ರಾಜಕೀಯ ಆರೋಪಗಳನ್ನು ಮಾಡುವುದು ಸರಿಯಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವೂ ಇವಿಎಂ ಮೂಲಕವೇ ಆಯ್ಕೆಯಾಗಿದೆ. ಬಿಜೆಪಿ ಬ್ಯಾಲೆಟ್ ಪೇಪರ್ ಮೂಲಕ ನಡೆದ ನಾಲ್ಕು ವಿಧಾನ ಪರಿಷತ್ ಸ್ಥಾನಗಳ ಚುನಾವಣೆಯಲ್ಲೂ ಗೆಲುವು ಸಾಧಿಸಿದೆ ಎಂದು ತಿಳಿಸಿದರು.
ಇನ್ನು ರಾಜ್ಯದಲ್ಲಿ ಆಹಾರ ಪದಾರ್ಥಗಳು, ಬಸ್ ಪ್ರಯಾಣ ದರ ಹಾಗೂ ಮದ್ಯದ ಬೆಲೆ ಏರಿಕೆಯಾಗುತ್ತಿದೆ ಎಂದು ಆರೋಪಿಸಿದ ನಿರಾಣಿ, ಕಳೆದ 80 ವರ್ಷಗಳಲ್ಲಿಯೇ ರಾಜ್ಯದಲ್ಲಿ ಅತಿ ಹೆಚ್ಚು ಸಾಲ ಮಾಡಿರುವ ಸರ್ಕಾರ ಇದಾಗಿದೆ ಎಂದು ಟೀಕಿಸಿದರು. ರಾಜ್ಯದ ಬಜೆಟ್ ಸುಮಾರು ₹4.5 ಲಕ್ಷ ಕೋಟಿ ಇದ್ದರೆ, ಅಷ್ಟೇ ಪ್ರಮಾಣದ ಸಾಲವನ್ನೂ ಕಾಂಗ್ರೆಸ್ ಸರ್ಕಾರ ಮಾಡಿದೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ಅಭಿವೃದ್ಧಿ ಕಾಮಗಾರಿಗಳು ಕುಂಠಿತಗೊಂಡಿದ್ದು, ಮೂಲಸೌಕರ್ಯಗಳ ಅಭಿವೃದ್ಧಿಗೂ ಆದ್ಯತೆ ಸಿಗುತ್ತಿಲ್ಲ ಎಂದು ದೂರಿದರು. ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ₹5,000 ಕೋಟಿ ವೆಚ್ಚದ ಲೆಕ್ಕ ನೀಡಲು ಲಕ್ಷ್ಮಿ ಹೆಬ್ಬಾಳ್ಕರ್ ಸಿದ್ಧರಿಲ್ಲ. ಬಿಜೆಪಿ ಸರ್ಕಾರದ ಕೊನೆಯ ಅವಧಿಯಲ್ಲಿ ಬ್ಯಾಂಕ್ ಖಾತೆಯಲ್ಲಿ ₹25 ಸಾವಿರ ಕೋಟಿ ಹಣವಿತ್ತು. ಆಲಮಟ್ಟಿ ಸಂತ್ರಸ್ತರ ಪರಿಹಾರಕ್ಕಾಗಿ ₹5 ಸಾವಿರ ಕೋಟಿ ಮೀಸಲಿಡಲಾಗಿತ್ತು. ಈ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳಲಾಗಿದೆ ಎಂದು ನಿರಾಣಿ ದೂರಿದರು.
ರಾಜ್ಯದಿಂದ ದೊಡ್ಡ ದೊಡ್ಡ ಕಂಪನಿಗಳು ಬೇರೆ ರಾಜ್ಯಗಳಿಗೆ ಸ್ಥಳಾಂತರಗೊಳ್ಳುತ್ತಿವೆ. ತಮ್ಮ ಬಯೋ ಪ್ಲಾಸ್ಟಿಕ್ ತಯಾರಿಕಾ ಘಟಕ ನಿರ್ಮಾಣದ ಪ್ರಸ್ತಾವನೆಯನ್ನೂ ಮುಖ್ಯಮಂತ್ರಿ ತಿರಸ್ಕರಿಸಿದ್ದಾರೆ. ಹಲವು ಕಾಂಗ್ರೆಸ್ ನಾಯಕರು ಬಿಜೆಪಿ ಸೇರ್ಪಡೆಗೆ ಸಿದ್ಧರಾಗಿದ್ದಾರೆ ಎಂದೂ ಅವರು ಹೇಳಿಕೊಂಡರು.
ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯೇ ಎಂಬ ಪ್ರಶ್ನೆಗೆ ಉತ್ತರಿಸಿದ ನಿರಾಣಿ, ಸದ್ಯ ಪಕ್ಷದ ರಾಜ್ಯ ಉಪಾಧ್ಯಕ್ಷನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಯಾವುದೇ ಹುದ್ದೆಯ ಆಕಾಂಕ್ಷಿಯಲ್ಲ. ಪಕ್ಷದ ಹೈಕಮಾಂಡ್ ಯಾವುದೇ ಜವಾಬ್ದಾರಿ ನೀಡಿದರೂ ಅದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ. ಈ ಕುರಿತು ಅಂತಿಮ ನಿರ್ಧಾರ ನಾಯಕರಿಗೆ ಬಿಟ್ಟದ್ದು ಎಂದು ಸ್ಪಷ್ಟಪಡಿಸಿದರು.









