ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯದ ಹಿತಾಸಕ್ತಿಗಾಗಿ ಎಲ್ಲಾ ರಾಜಕೀಯ ಪಕ್ಷಗಳು ಒಗ್ಗಟ್ಟಿನಿಂದ ನಿಲ್ಲಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಕಾವೇರಿ ನದಿ ನೀರಿನ ವಿಚಾರದ ಸರ್ವಪಕ್ಷ ಸಭೆಯಲ್ಲಿ ಮಾತನಾಡಿದ ಸಿಎಂ ಡಿಕೆಶಿ, “ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಕಾವೇರಿ ವಿಚಾರವನ್ನು ನಾವೆಲ್ಲರೂ ಮೈಗೆ ಅಂಟಿಸಿಕೊಂಡೇ ಬೆಳೆದಿದ್ದೇವೆ. ರಾಜಕೀಯಕ್ಕಿಂತ ರಾಜ್ಯದ ರೈತರು ಮತ್ತು ಜನರ ಹಿತವೇ ಮುಖ್ಯ” ಎಂದು ಹೇಳಿದರು.
ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ರಾಜಕೀಯವನ್ನು ಬದಿಗಿಟ್ಟು ಒಟ್ಟಾಗಿ ನಿಲ್ಲುವ ಸಂಪ್ರದಾಯ ಕರ್ನಾಟಕಕ್ಕಿದೆ. ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಬೇಕು ಎನ್ನುವುದು ಸರ್ಕಾರದ ನಿಲುವಾಗಿದ್ದು, ಈ ವಿಚಾರದಲ್ಲಿ ಎಲ್ಲರೂ ಸಹಮತ ಹೊಂದಿದ್ದಾರೆ ಎಂಬ ವಿಶ್ವಾಸವಿದೆ ಎಂದು ಅವರು ತಿಳಿಸಿದರು.
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಹಾಗೂ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಸಭೆಗಳಿಗೂ ಮುನ್ನ ಕೇಂದ್ರ ಸಚಿವರಾದ ಸಿಆರ್ ಪಾಟೀಲ್, ಪ್ರಹ್ಲಾದ್ ಜೋಶಿ, ವಿ. ಸೋಮಣ್ಣ ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಮತ್ತು ಜಗದೀಶ್ ಶೆಟ್ಟರ್ ಅವರನ್ನು ಭೇಟಿ ಮಾಡಿ ರಾಜ್ಯದ ಪರಿಸ್ಥಿತಿ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದೇನೆ. ಅವರು ಕೂಡ ಕೇಂದ್ರ ಮಟ್ಟದಲ್ಲಿ ರಾಜ್ಯದ ಪರವಾಗಿ ಧ್ವನಿ ಎತ್ತಿದ್ದಾರೆ ಎಂದು ಸಿಎಂ ಹೇಳಿದರು.
ದೆಹಲಿಯಲ್ಲಿ ನಡೆದ ಸಂಸದೀಯ ಸಭೆಯಲ್ಲೂ ಪಕ್ಷಭೇದ ಮರೆತು ಎಲ್ಲಾ ಸಂಸದರು ರಾಜ್ಯದ ಪರವಾಗಿ ನಿಲ್ಲುವ ಭರವಸೆ ನೀಡಿದ್ದಾರೆ. ಅವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
ಕಾವೇರಿ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಈ ಸರ್ವಪಕ್ಷ ಸಭೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಭಾಗವಹಿಸಿದ್ದರು.
ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಬಿ.ಎಸ್. ಯಡಿಯೂರಪ್ಪ, ಎಚ್.ಡಿ. ಕುಮಾರಸ್ವಾಮಿ, ಸದಾನಂದ ಗೌಡ, ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ವಿ. ಸೋಮಣ್ಣ, ಶೋಭಾ ಕರಂದ್ಲಾಜೆ, ಉಪಮುಖ್ಯಮಂತ್ರಿ ಜಿ. ಪರಮೇಶ್ವರ್, ಸಚಿವರಾದ ರಾಮಲಿಂಗಾ ರೆಡ್ಡಿ, ಕೃಷ್ಣ ಬೈರೇಗೌಡ, ಎಂ.ಬಿ. ಪಾಟೀಲ್, ಕೆ.ಜೆ. ಜಾರ್ಜ್ ಸೇರಿದಂತೆ ಹಲವು ಹಿರಿಯ ನಾಯಕರು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ಇದಲ್ಲದೆ ನವದೆಹಲಿಯ ಕರ್ನಾಟಕ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ಸಂಸದ ಗೋವಿಂದ ಕಾರಜೋಳ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವ ಎಚ್.ಕೆ. ಪಾಟೀಲ್, ಬಿ.ಕೆ. ಹರಿಪ್ರಸಾದ್, ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್, ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಮುಖ್ಯಮಂತ್ರಿಗಳ ವಿಶೇಷ ಸಲಹೆಗಾರ ಜಿ.ಸಿ. ಚಂದ್ರಶೇಖರ್, ಆರ್ಥಿಕ ಸಲಹೆಗಾರ ಎಲ್.ಕೆ. ಅತೀಕ್ ಹಾಗೂ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು.



