ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಅಗಡಿ ಎಂಜಿನಿಯರಿಂಗ್ ಕಾಲೇಜಿನ ಪ್ರೊ. ವೆಂಕಟ ಸುಬ್ಬಾ ಶೆಟ್ಟಿ ಗ್ರಂಥಾಲಯದಲ್ಲಿ ಗ್ರಂಥಾಲಯ ಮಾಹಿತಿ ವಿಜ್ಞಾನ ಕ್ಷೇತ್ರದ ಪಿತಾಮಹ ಪದ್ಮಶ್ರೀ ಡಾ. ಎಸ್.ಆರ್. ರಂಗನಾಥನ್ ಅವರ 134ನೇ ಜನ್ಮದಿನದ ಅಂಗವಾಗಿ ಗ್ರಂಥಪಾಲಕರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಗ್ರಂಥಾಲಯಗಳ ಮಹತ್ವ, ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಯಲ್ಲಿ ಗ್ರಂಥಪಾಲಕರ ಪಾತ್ರ ಹಾಗೂ ಪುಸ್ತಕ ಓದುವ ಹವ್ಯಾಸ ಬೆಳೆಸುವ ಅಗತ್ಯದ ಕುರಿತು ಚರ್ಚಿಸಲಾಯಿತು. ಜ್ಞಾನಾರ್ಜನೆಗೆ ಗ್ರಂಥಾಲಯಗಳು ಪ್ರಮುಖ ಕೇಂದ್ರಗಳಾಗಿದ್ದು, ವಿದ್ಯಾರ್ಥಿಗಳು ಪಠ್ಯಪುಸ್ತಕಗಳ ಜತೆಗೆ ವಿವಿಧ ವಿಷಯಗಳ ಪುಸ್ತಕಗಳನ್ನು ಓದುವ ಮೂಲಕ ತಮ್ಮ ಜ್ಞಾನವನ್ನು ವಿಸ್ತರಿಸಿಕೊಳ್ಳಬೇಕು ಎಂದು ತಿಳಿಸಲಾಯಿತು.
ಡಾ. ಎಸ್.ಆರ್. ರಂಗನಾಥನ್ ಅವರು ಗ್ರಂಥಾಲಯ ಕ್ಷೇತ್ರಕ್ಕೆ ನೀಡಿದ ಅಮೂಲ್ಯ ಕೊಡುಗೆ ಹಾಗೂ ಅವರ ಸೇವೆಯನ್ನು ಸ್ಮರಿಸಲಾಯಿತು. ಅವರ ತತ್ವಗಳು ಇಂದಿಗೂ ಗ್ರಂಥಾಲಯಗಳ ಅಭಿವೃದ್ಧಿಗೆ ಮಾರ್ಗದರ್ಶಿಯಾಗಿವೆ ಎಂದು ಅಭಿಪ್ರಾಯ ವ್ಯಕ್ತವಾಯಿತು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯ ಡಾ. ಪರಶುರಾಮ ಬಾರ್ಕಿ, ಡೀನ್ ಅಕಾಡೆಮಿಕ್ಸ್ ಡಾ. ಸುಭಾಸ್ ಮೇಟಿ, ಆಡಳಿತಾಧಿಕಾರಿ ವಿಕ್ರಂ ಶಿರೋಳ, ವಿವಿಧ ವಿಭಾಗಗಳ ಮುಖ್ಯಸ್ಥರು, ಸಹಾಯಕ ಗ್ರಂಥಪಾಲಕರಾದ ಜಗದೀಶ್ ಶಿಗ್ಲಿಮಠ, ವೀರಯ್ಯ ಬಾಳೂರುಮಠ ಹಾಗೂ ಗ್ರಂಥಾಲಯದ ಸಿಬ್ಬಂದಿ ಉಪಸ್ಥಿತರಿದ್ದರು. ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.



