ಮೈಸೂರು: ನಗರದಲ್ಲಿ ಲೋಕಾಯುಕ್ತ ಪೊಲೀಸರು ಭ್ರಷ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದಾರೆ.
ಇಬ್ಬರು ಭ್ರಷ್ಟ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಒಟ್ಟು 7 ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿ ಮನೆಗಳು ಹಾಗೂ ಕಚೇರಿಗಳಲ್ಲಿ ಪರಿಶೀಲನೆ ನಡೆಸಿದ್ದಾರೆ. ಮೈಸೂರು ಮಹಾನಗರ ಪಾಲಿಕೆ ಹಾಗೂ ಟಿ.ನರಸೀಪುರ ಪುರಸಭೆಯ ಜೆ.ಇ. ಕೆ.ಆರ್. ಚಂದ್ರಶೇಖರ್ ಅವರಿಗೆ ಸೇರಿದ ಮೈಸೂರಿನ ವಿಜಯನಗರ ಮತ್ತು ಕೆಜಿ ಕೊಪ್ಪಲು ನಿವಾಸಗಳು ಸೇರಿದಂತೆ ಟಿ.ನರಸೀಪುರ ಕಚೇರಿಯಲ್ಲಿ ದಾಳಿ ನಡೆಸಲಾಗಿದೆ.
ಈ ಶೋಧ ಕಾರ್ಯಾಚರಣೆಯಲ್ಲಿ ಸುಮಾರು 60 ಲಕ್ಷ ರೂಪಾಯಿ ನಗದು ಪತ್ತೆಯಾಗಿದ್ದು, ದಾಖಲೆಗಳ ಪರಿಶೀಲನೆ ಮುಂದುವರಿದಿದೆ. ಇದೇ ವೇಳೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಇಲಾಖೆಯ ಡೆಪ್ಯುಟಿ ಎಲೆಕ್ಟ್ರಿಕಲ್ ಇಂಜಿನಿಯರ್ ಅಲ್ತಾಫ್ ಹುಸೇನ್ ಜಕಾರ್ತಿ ಅವರಿಗೆ ಸೇರಿದ ಎರಡು ನಿವಾಸಗಳು ಹಾಗೂ ಕಚೇರಿಗಳಲ್ಲೂ ಲೋಕಾಯುಕ್ತ ಪೊಲೀಸರು ಶೋಧ ನಡೆಸಿದ್ದಾರೆ.
ದಾಳಿ ವೇಳೆ ಮಹತ್ವದ ದಾಖಲೆಗಳು ಪತ್ತೆಯಾಗಿರುವ ಸಾಧ್ಯತೆ ಇದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.



