ಚಿತ್ರದುರ್ಗ/ಹಾಸನ/ಬಾಗಲಕೋಟೆ: ರಾಜ್ಯದಲ್ಲಿ ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪ ಎದುರಿಸುತ್ತಿರುವ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಬಿಸಿ ಮುಟ್ಟಿಸಿದ್ದಾರೆ.
ಚಿತ್ರದುರ್ಗ, ಹಾಸನ ಹಾಗೂ ಬಾಗಲಕೋಟೆ ಜಿಲ್ಲೆಗಳ ವಿವಿಧೆಡೆ ಅಧಿಕಾರಿಗಳ ಮನೆ, ಕಚೇರಿ ಸೇರಿದಂತೆ ಹಲವು ಸ್ಥಳಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ ಮಹತ್ವದ ದಾಖಲೆಗಳ ಪರಿಶೀಲನೆ ಕೈಗೊಂಡಿದ್ದಾರೆ.
ಚಿತ್ರದುರ್ಗದಲ್ಲಿ ಇಬ್ಬರು ಅಧಿಕಾರಿಗಳ ಮನೆ ಮೇಲೆ ದಾಳಿ:
ಚಿತ್ರದುರ್ಗ ಜಿಲ್ಲಾಸ್ಪತ್ರೆಯ ಜಿಲ್ಲಾ ಸರ್ಜನ್ ಡಾ. ರವೀಂದ್ರ ಹಾಗೂ ತೂಕ ಮತ್ತು ಅಳತೆ ಇಲಾಖೆಯ ಇನ್ಸ್‌ಪೆಕ್ಟರ್ ವೆಂಕಟೇಶ್ ಲೋಕಾಯುಕ್ತ ದಾಳಿಗೆ ಒಳಗಾದ ಅಧಿಕಾರಿಗಳು. ವಿದ್ಯಾನಗರದಲ್ಲಿರುವ ವೆಂಕಟೇಶ್ ಅವರ ನಿವಾಸ ಹಾಗೂ ಚಳ್ಳಕೆರೆ ರಸ್ತೆಯಲ್ಲಿರುವ ಡಾ. ರವೀಂದ್ರ ಅವರ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ಕಲಾವತಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಲಾಗಿದೆ.
ಜಮಖಂಡಿಯಲ್ಲಿ ಸಹಾಯಕ ನಿರ್ದೇಶಕನಿಗೆ ಲೋಕಾಯುಕ್ತ ಬಿಸಿ:
ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕು ಪಂಚಾಯತ್‌ನ ಪಂಚಾಯತ್ ರಾಜ್ ವಿಭಾಗದ ಸಹಾಯಕ ನಿರ್ದೇಶಕ ಸಂಜು ಹಿಪ್ಪರಗಿ ಅವರ ನಿವಾಸಗಳ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜಮಖಂಡಿ ನಗರದ ಮೈಗೂರು ರಸ್ತೆ ಹಾಗೂ ವಿಜಯನಗರ ಬಡಾವಣೆಯಲ್ಲಿರುವ ಅವರ ಎರಡು ಮನೆಗಳಲ್ಲಿ ಪರಿಶೀಲನೆ ನಡೆದಿದೆ.
ಬಾಗಲಕೋಟೆ ಲೋಕಾಯುಕ್ತ ಎಸ್‌ಪಿ ಮಹಾಲಿಂಗ್ ನಂದಗಾವಿ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಸುರೇಶ್ ರೆಡ್ಡಿ ನೇತೃತ್ವದ ಏಳು ಮಂದಿ ಅಧಿಕಾರಿಗಳ ತಂಡ ಈ ಕಾರ್ಯಾಚರಣೆ ನಡೆಸಿದೆ. ಸಂಜು ಹಿಪ್ಪರಗಿ ವಿರುದ್ಧವೂ ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪ ಕೇಳಿಬಂದಿದೆ.
ಹಾಸನದಲ್ಲಿ ಅರಣ್ಯಾಧಿಕಾರಿಗೆ ಸೇರಿದ ಐದು ಕಡೆ ಪರಿಶೀಲನೆ:
ಇನ್ನು ಹಾಸನ ಜಿಲ್ಲೆಯ ಸಕಲೇಶಪುರ ವಲಯದ ಅರಣ್ಯಾಧಿಕಾರಿ ಹೇಮಂತ್‌ಕುಮಾರ್ ಅವರಿಗೂ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಅವರ ನಿವಾಸ, ಕಚೇರಿ ಹಾಗೂ ಇತರೆ ಸ್ಥಳಗಳು ಸೇರಿದಂತೆ ಒಟ್ಟು ಐದು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಲಾಗಿದೆ.
ಹಾಸನ ನಗರದ ಚಿಕ್ಕಹೊನ್ನೇನಹಳ್ಳಿಯಲ್ಲಿರುವ ಮನೆ, ಸಕಲೇಶಪುರದ ಬಾಡಿಗೆ ಮನೆ ಹಾಗೂ ಕಚೇರಿಯಲ್ಲಿ ಪರಿಶೀಲನೆ ನಡೆದಿದೆ. ಅಲ್ಲದೆ, ಆಲೂರು ತಾಲೂಕಿನ ದೊಡ್ಡಮಗ್ಗೆ ಗ್ರಾಮದಲ್ಲಿರುವ ಅವರ ಮಾವನ ಮನೆ ಹಾಗೂ ಕುವೆಂಪು ನಗರದಲ್ಲಿರುವ ಆಪ್ತ ಗುತ್ತಿಗೆದಾರ ಹರೀಶ್ ಅವರ ನಿವಾಸದ ಮೇಲೂ ದಾಳಿ ನಡೆಸಲಾಗಿದೆ.
ಲೋಕಾಯುಕ್ತ ಎಸ್‌ಪಿ ನಂದಿನಿ, ಡಿವೈಎಸ್ಪಿ ಸುರೇಶ್ ಹಾಗೂ ಇನ್ಸ್‌ಪೆಕ್ಟರ್‌ಗಳಾದ ಶಿಲ್ಪಾ, ಗವಿರಾಜು ಮತ್ತು ಚಂದ್ರಶೇಖರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಸದ್ಯ ವಿವಿಧ ಸ್ಥಳಗಳಲ್ಲಿ ಅಧಿಕಾರಿಗಳು ದಾಖಲೆಗಳು, ಆಸ್ತಿ ವಿವರಗಳು ಹಾಗೂ ಇತರೆ ಮಹತ್ವದ ಮಾಹಿತಿಗಳನ್ನು ಪರಿಶೀಲಿಸುತ್ತಿದ್ದಾರೆ.







