ಗದಗ: ಜಿಲ್ಲೆಯಲ್ಲಿ ಬೆಳ್ಳಂಬೆಳಿಗ್ಗೆ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿರುವ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ದಾಳಿ ನಡೆಸಿದ್ದಾರೆ. ಶಿರಹಟ್ಟಿ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲೂಕು ಅಧಿಕಾರಿ ಮರಿಗೌಡ ಸುರಕೋಡ ಅವರ ಮನೆ ಸೇರಿದಂತೆ ಒಟ್ಟು ಆರು ಕಡೆಗಳಲ್ಲಿ ಶೋಧ ಕಾರ್ಯಾಚರಣೆ ಕೈಗೊಳ್ಳಲಾಗಿದೆ.
ಗದಗ ನಗರದ ಕಳಸಾಪೂರ ರಸ್ತೆಯ ಹೆರಕಲ್ ಲೇಔಟ್‌ನಲ್ಲಿರುವ ನಿವಾಸದ ಮೇಲೆ ದಾಳಿ ನಡೆದಿದ್ದು, ಗದಗ ಮತ್ತು ಧಾರವಾಡ ಸೇರಿ ಆರು ತಂಡಗಳಲ್ಲಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಧಾರವಾಡ ಲೋಕಾಯುಕ್ತ ಎಸ್ಪಿ ಸಿದ್ದಲಿಂಗಪ್ಪ ಅವರ ನೇತೃತ್ವದಲ್ಲಿ ದಾಳಿ ನಡೆದಿದ್ದು, ಡಿವೈಎಸ್ಪಿ ವಿಜಯ ಬಿರಾದಾರ ಸೇರಿದಂತೆ ಹಲವು ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ದಾಳಿ ವೇಳೆ ಅಪಾರ ಪ್ರಮಾಣದ ಬೇನಾಮಿ ಆಸ್ತಿ ದಾಖಲೆಗಳು ಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ. ಅಳಿಯ ಸೇರಿದಂತೆ ಹಲವರ ಹೆಸರಿನಲ್ಲಿ ಆಸ್ತಿ ಮಾಡಿರುವ ಆರೋಪ ಕೇಳಿ ಬಂದಿದೆ. ಇದಲ್ಲದೆ, ಕಚೇರಿ ಸಿಬ್ಬಂದಿಯ ಪತ್ನಿಯ ಹೆಸರಲ್ಲಿ ಆಸ್ತಿ ಇರುವ ಸಾದ್ಯತೆ ಇದ್ದು, ಸಂಬಂಧಿತ ದಾಖಲೆಗಳ ಪರಿಶೀಲನೆ ಮುಂದುವರಿದಿದೆ.
ಗದಗ ನಿವಾಸದ ಜೊತೆಗೆ ಶಿರಹಟ್ಟಿ ಕಚೇರಿ ಹಾಗೂ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಂಗಳ ಗ್ರಾಮದಲ್ಲಿರುವ ಮನೆ ಮೇಲೂ ದಾಳಿ ನಡೆಸಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದ್ದು, ಹೆಚ್ಚಿನ ವಿವರಗಳು ಹೊರಬರುವ ನಿರೀಕ್ಷೆಯಿದೆ.



