ಮೈಸೂರು: ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಮೈಸೂರಿನ ಅರಣ್ಯ ಭವನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಲಯ ಅರಣ್ಯಾಧಿಕಾರಿ (RFO) ಸುರೇಂದ್ರ ಅವರ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಅಧಿಕಾರಿಯ ಆದಾಯಕ್ಕಿಂತ ಶೇಕಡಾ 130ರಷ್ಟು ಹೆಚ್ಚಿನ ಆಸ್ತಿ ಹೊಂದಿರುವುದು ಪತ್ತೆಯಾಗಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.
ನವೆಂಬರ್ 18ರಂದು ಚಾಮರಾಜನಗರ ಲೋಕಾಯುಕ್ತ ಪೊಲೀಸರು ಈ ದಾಳಿ ನಡೆಸಿದ್ದು, ಪರಿಶೀಲನೆ ವೇಳೆ ಅಪಾರ ಪ್ರಮಾಣದ ಸ್ಥಿರ ಮತ್ತು ಚರಾಸ್ತಿಗಳು ಪತ್ತೆಯಾಗಿವೆ. ಮೈಸೂರಿನ ಶ್ರೀರಾಂಪುರ ಬಡಾವಣೆಯಲ್ಲಿರುವ ಅಪಾರ್ಟ್ಮೆಂಟ್ನಲ್ಲಿ ಸುರೇಂದ್ರ ಅವರು ಒಟ್ಟು 12 ಮನೆಗಳನ್ನು ಹೊಂದಿರುವುದು ಅಧಿಕಾರಿಗಳ ಪರಿಶೀಲನೆಯಲ್ಲಿ ಬೆಳಕಿಗೆ ಬಂದಿದೆ.
ಇದಲ್ಲದೆ, ಅವರ ನಿವಾಸದಲ್ಲಿ ಸುಮಾರು 350 ಗ್ರಾಂ ಚಿನ್ನಾಭರಣವೂ ಪತ್ತೆಯಾಗಿದೆ. ಆದಾಯಕ್ಕೆ ಹೋಲಿಸಿದರೆ ಶೇಕಡಾ 130ರಷ್ಟು ಅಧಿಕ ಆಸ್ತಿ ಹೊಂದಿರುವುದನ್ನು ಲೋಕಾಯುಕ್ತ ಅಧಿಕಾರಿಗಳು ಗುರುತಿಸಿದ್ದಾರೆ ಎಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ದಾಳಿಯ ಸಂದರ್ಭದಲ್ಲಿ ಸ್ಥಿರಾಸ್ತಿ ಮತ್ತು ಚರಾಸ್ತಿಗಳಿಗೆ ಸಂಬಂಧಿಸಿದ ಮಹತ್ವದ ದಾಖಲೆಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಆರೋಪಿತ ಸರ್ಕಾರಿ ಅಧಿಕಾರಿಯ ಮನೆ ಹಾಗೂ ಕಚೇರಿಗಳ ಮೇಲೆ ಚಾಮರಾಜನಗರ ಮತ್ತು ಮೈಸೂರು ಲೋಕಾಯುಕ್ತ ಪೊಲೀಸ್ ಠಾಣೆಗಳ ಸಿಬ್ಬಂದಿ ಜಂಟಿಯಾಗಿ ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದರು.
ಒಟ್ಟಿನಲ್ಲಿ, ಅರಣ್ಯಾಧಿಕಾರಿ ಸುರೇಂದ್ರ ಅವರ ವಿರುದ್ಧದ ಆದಾಯಕ್ಕಿಂತ ಅಧಿಕ ಆಸ್ತಿ ಪ್ರಕರಣದಲ್ಲಿ ಲೋಕಾಯುಕ್ತ ಅಧಿಕಾರಿಗಳು ತನಿಖೆ ಮುಂದುವರಿಸಿದ್ದು, ಪತ್ತೆಯಾಗಿರುವ ಆಸ್ತಿಗಳ ಮೂಲ ಹಾಗೂ ದಾಖಲೆಗಳ ಕುರಿತು ಹೆಚ್ಚಿನ ಪರಿಶೀಲನೆ ನಡೆಯಲಿದೆ.








