ಗದಗ: ಗದಗ-ಬೆಟಗೇರಿ ನಗರಸಭೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಸೋಮವಾರ ಬೆಳಗ್ಗೆ ದಿಢೀರ್ ದಾಳಿ ನಡೆಸಿ ವ್ಯಾಪಕ ಶೋಧ ಕಾರ್ಯ ನಡೆಸುತ್ತಿದ್ದಾರೆ.
ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದು ನಗರಸಭೆ ಕಚೇರಿಗೆ ಆಗಮಿಸಿದ ಲೋಕಾಯುಕ್ತ ಅಧಿಕಾರಿಗಳು ಕಂದಾಯ ಹಾಗೂ ಎಂಜಿನಿಯರಿಂಗ್ ವಿಭಾಗಗಳಲ್ಲಿ ದಾಖಲೆಗಳ ಇಂಚಿಂಚು ಪರಿಶೀಲನೆ ನಡೆಸಿದರು. ಅಧಿಕಾರಿಗಳ ಪ್ರಶ್ನೆಗಳಿಗೆ ನಗರಸಭೆ ಸಿಬ್ಬಂದಿ ಉತ್ತರಿಸುವಲ್ಲಿ ತೊಡಗಿದ್ದರು.
ವಾಣಿಜ್ಯ ಕಟ್ಟಡಗಳ ಪರವಾನಗಿ ನೀಡುವಲ್ಲಿ ಅಕ್ರಮ, ನಗರಸಭೆ ಆಸ್ತಿಗಳ ಬಾಡಿಗೆ ಸಂಗ್ರಹದಲ್ಲಿ ಅಕ್ರಮ, ಕುಡಿಯುವ ನೀರಿನ ನಿರ್ವಹಣೆ, ಬೀದಿ ದೀಪಗಳ ನಿರ್ವಹಣೆ ಸೇರಿದಂತೆ ಹಲವು ವಿಷಯಗಳಿಗೆ ಸಂಬಂಧಿಸಿದಂತೆ ದೂರುಗಳು ದಾಖಲಾಗಿದ್ದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.
ಗದಗ ಲೋಕಾಯುಕ್ತ ಡಿವೈಎಸ್ಪಿ ವಿಜಯ ಬಿರಾದಾರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ 6 ಮಂದಿ ಸಿಪಿಐಗಳು ಹಾಗೂ 15ಕ್ಕೂ ಹೆಚ್ಚು ಸಿಬ್ಬಂದಿ ಭಾಗವಹಿಸಿದ್ದರು. ಗದಗ ಮತ್ತು ಧಾರವಾಡ ಲೋಕಾಯುಕ್ತ ಅಧಿಕಾರಿಗಳು ಸಂಯುಕ್ತವಾಗಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ನಗರಸಭೆಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ದಾಳಿಯಿಂದ ಅಧಿಕಾರಿಗಳು ಹಾಗೂ ಸಿಬ್ಬಂದಿಯಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಶೋಧ ಕಾರ್ಯ ಮುಂದುವರಿದಿದ್ದು, ದಾಖಲೆಗಳ ಪರಿಶೀಲನೆಯ ಬಳಿಕ ಹೆಚ್ಚಿನ ಮಾಹಿತಿ ಹೊರಬೀಳುವ ಸಾಧ್ಯತೆ ಇದೆ.



