ಮಡಿಕೇರಿ: ಕೊಡಗು ಜಿಲ್ಲೆಯ ನಾಪೋಕ್ಲು ಸಮೀಪದ ಕುಂಬಳದಾಳು ಗ್ರಾಮದಲ್ಲಿ ಯುವಕನೊಬ್ಬ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ.
ಕವನ್ (24) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ಈ ಘಟನೆ ನಾಪೋಕ್ಲು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಕವನ್ ಸ್ಟಾಕ್ ಮಾರ್ಕೆಟ್ನಲ್ಲಿ ಹಣ ಕಳೆದುಕೊಂಡಿದ್ದರಿಂದ ಮನನೊಂದು ಈ ಕೃತ್ಯಕ್ಕೆ ಮುಂದಾಗಿರುವ ಶಂಕೆ ವ್ಯಕ್ತವಾಗಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ತನಿಖೆಯಿಂದಷ್ಟೇ ತಿಳಿಯಬೇಕಿದೆ.
ಸದ್ಯ ನಾಪೋಕ್ಲು ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.



