ಮಂಡ್ಯ: ಪ್ರೇಮ ಸಂಬಂಧದ ವಿವಾದ ತೀವ್ರ ಸ್ವರೂಪ ಪಡೆದುಕೊಂಡು ಯುವಕನ ಮನೆಯೇ ಹೊತ್ತಿ ಉರಿದ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಚುಂಚಗಹಳ್ಳಿ ಗ್ರಾಮದಲ್ಲಿ ನಡೆದಿದೆ.
ಏನಿದು ಘಟನೆ?
ಮದ್ದೂರು ತಾಲೂಕಿನ ಚುಂಚಗಹಳ್ಳಿ ಗ್ರಾಮದಲ್ಲಿ ಗ್ರಾಮದ ವಿನೋದ ಹಾಗೂ ಕಾವ್ಯ ನಡುವೆ ಪ್ರೇಮ ಸಂಬಂಧವಿತ್ತು ಎನ್ನಲಾಗಿದೆ. ಕಾವ್ಯಗೆ 18 ವರ್ಷ ತುಂಬಿದ ಬಳಿಕ ಇಬ್ಬರೂ ಮದುವೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಈ ವಿಷಯ ಕಾವ್ಯ ಕುಟುಂಬಸ್ಥರಿಗೆ ತಿಳಿಯುತ್ತಿದ್ದಂತೆ ರೋಷೋದ್ರಿಕ್ತಗೊಂಡ ಅವರು ವಿನೋದನ ಮನೆಗೆ ಬೆಂಕಿ ಹಚ್ಚಿದ ಆರೋಪ ಕೇಳಿಬಂದಿದೆ.
ಮನೆ ಮುಕ್ಕಾಲು ಭಾಗ ಸುಟ್ಟು ಹಾನಿ
ಬೆಂಕಿ ಅವಘಡದಿಂದ ಯುವಕ ವಿನೋದನ ಮನೆ ಮುಕ್ಕಾಲು ಭಾಗ ಸುಟ್ಟು ಕರಕಲಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಾಶವಾಗಿವೆ ಎಂದು ತಿಳಿದುಬಂದಿದೆ. ಬೆಂಗಳೂರಿನಲ್ಲಿ ಎಲೆಕ್ಟ್ರೀಷಿಯನ್ ಆಗಿ ಕೆಲಸ ಮಾಡುತ್ತಿದ್ದ ವಿನೋದನ ಕುಟುಂಬಕ್ಕೆ ದೊಡ್ಡ ನಷ್ಟ ಉಂಟಾಗಿದೆ.
ಪೊಲೀಸ್ ಪರಿಶೀಲನೆ:
ಘಟನೆಯ ಮಾಹಿತಿ ತಿಳಿದ ತಕ್ಷಣ ಮದ್ದೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಘಟನೆಯ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.



