ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮವಾಗಿ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಅಕ್ಟೋಬರ್ 18ರಿಂದ 23ರ ವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಕ್ಟೋಬರ್ 18 ಮತ್ತು 19ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯ ನಿರೀಕ್ಷೆ ಇರುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಮುದ್ರದಲ್ಲಿ ವಾತಾವರಣದ ವ್ಯತ್ಯಯಗಳು ಕಂಡುಬಂದಿರುವುದರಿಂದ ಕರಾವಳಿ ಭಾಗದಲ್ಲಿ ಅಲರ್ಟ್ ಮುಂದುವರಿಸಲಾಗಿದ್ದು, ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.
ದಕ್ಷಿಣ ಒಳನಾಡಿನ ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿಯೂ ಇಂದು ಭಾರಿ ಮಳೆಯ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಿಗೆ ಕೂಡ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಅಕ್ಟೋಬರ್ 24 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಂಡ್ಯ, ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಸಹಜ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಅಕ್ಟೋಬರ್ 23ರವರೆಗೆ ಸಾಧಾರಣ ಮಳೆಯಾಗುವ ನಿರೀಕ್ಷೆ ವ್ಯಕ್ತವಾಗಿದೆ.