ಬೆಂಗಳೂರು: ನಗರದಲ್ಲಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಕೊರತೆ ಎದುರಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹೋಟೆಲ್ ಮತ್ತು ಆಹಾರ ಸೇವಾ ಕ್ಷೇತ್ರದಲ್ಲಿ ಆತಂಕ ವ್ಯಕ್ತವಾಗಿದೆ. ಈ ಸಮಸ್ಯೆಯ ಹಿನ್ನೆಲೆಯಲ್ಲಿ ನಗರದ ಹಲವು ಹೋಟೆಲ್‌ಗಳು ಮುಚ್ಚುವ ಅಪಾಯವಿದೆ ಎಂದು ಉದ್ಯಮಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಈ ವಿಷಯವನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರುವಂತೆ ಮನವಿ ಸಲ್ಲಿಸಿದ್ದು, ಭಾಜಪಾ ಸಂಸದ ತೇಜಸ್ವಿ ಸೂರ್ಯ ಮತ್ತು ಕೇಂದ್ರ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಪ್ರತ್ಯೇಕವಾಗಿ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಪತ್ರ ಬರೆದಿದ್ದಾರೆ.
ಸಂಸದ ತೇಜಸ್ವಿ ಸೂರ್ಯ ಪತ್ರದಲ್ಲಿ ಹೋಟೆಲ್ ಮತ್ತು ರೆಸ್ಟೋರೆಂಟ್ ಉದ್ಯಮವು ದಿನನಿತ್ಯದ ಅಡುಗೆ ಕಾರ್ಯಗಳಿಗೆ ಬಹುಪಾಲು ವಾಣಿಜ್ಯ ಎಲ್‌ಪಿಜಿ ಮೇಲೆಯೇ ಅವಲಂಬಿತವಾಗಿದೆ ಎಂದು ಗಮನಸೋಪಿಸಿದ್ದಾರೆ. ಪಿಎನ್‌ಜಿ ಅಥವಾ ವಿದ್ಯುತ್ ಆಧಾರಿತ ಅಡುಗೆ ವ್ಯವಸ್ಥೆಗಳು ಇನ್ನೂ ವ್ಯಾಪಕವಾಗಿ ಲಭ್ಯವಿಲ್ಲದ ಕಾರಣ, ಎಲ್‌ಪಿಜಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾದರೆ ಉದ್ಯಮ, ಉದ್ಯೋಗ ಮತ್ತು ಗ್ರಾಹಕರ ಸೇವೆಗಳ ಮೇಲೆ ನೇರ ಪರಿಣಾಮ ಬೀರುತ್ತದೆ ಎಂದು ಹೇಳಿದ್ದಾರೆ.
ಇದೇ ವೇಳೆ ಸಚಿವೆ ಶೋಭಾ ಕರಂದ್ಲಾಜೆ ಕೂಡ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಗಮನಕ್ಕೆ ಈ ಸಮಸ್ಯೆಯನ್ನು ತಂದಿದ್ದಾರೆ. ಅವರು ಬೆಂಗಳೂರಿನ ಹೋಟೆಲ್ ಅಸೋಸಿಯೇಷನ್ ನೀಡಿದ ಮನವಿ ಪತ್ರವನ್ನು ಸಹ ಪೂರೈಸಿದ್ದು, ಎಲ್‌ಪಿಜಿ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಇಲ್ಲದಂತೆ ಕ್ರಮ ಕೈಗೊಳ್ಳುವಂತೆ ಒತ್ತಾಯ ಮಾಡಿದ್ದಾರೆ.



