ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇದೀಗ ಮಾದಪ್ಪನ ಹುಂಡಿಯಲ್ಲಿ ಭರ್ಜರಿ ಕಾಣಿಕೆ ಸಂಗ್ರಹವಾಗಿದೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು, 34 ದಿನಗಳಲ್ಲಿ ಬರೋಬ್ಬರಿ 2 ಕೋಟಿ 21 ಲಕ್ಷ ರೂಪಾಯಿಗೂ ಅಧಿಕ ಹಣ ಸಂಗ್ರಹವಾಗಿದೆ.
ಮಂಗಳವಾರ ಬೆಳಗ್ಗೆಯಿಂದ ಸಂಜೆಯವರೆಗೆ ನಡೆದ ಹುಂಡಿ ಎಣಿಕೆ ಕಾರ್ಯದಲ್ಲಿ ಒಟ್ಟು 2 ಕೋಟಿ 21 ಲಕ್ಷ 62 ಸಾವಿರದ 915 ರೂಪಾಯಿ ಕಾಣಿಕೆ ಹಣ ಲಭಿಸಿದೆ.
ಆಗಸ್ಟ್ 19ರಿಂದ ಸೆಪ್ಟೆಂಬರ್ 21ರವರೆಗೆ 34 ದಿನಗಳ ಅವಧಿಯಲ್ಲಿ ಭಕ್ತರು ಈ ಕಾಣಿಕೆಯನ್ನು ಹುಂಡಿಗೆ ಅರ್ಪಿಸಿದ್ದಾರೆ.
ಇನ್ನು ಹಣದ ಜೊತೆಗೆ ಮಾದಪ್ಪನಿಗೆ ಚಿನ್ನ ಮತ್ತು ಬೆಳ್ಳಿಯನ್ನೂ ಭಕ್ತರು ಕಾಣಿಕೆಯಾಗಿ ನೀಡಿದ್ದಾರೆ. ಹುಂಡಿಯಲ್ಲಿ 68.5 ಗ್ರಾಂ ಚಿನ್ನ ಹಾಗೂ 1 ಕೆ.ಜಿ. 913 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ.
ಮಲೆ ಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಸಿಬ್ಬಂದಿ ನೇತೃತ್ವದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆದಿದೆ.
ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾಗಿರುವ ಮಲೆ ಮಹದೇಶ್ವರ ಬೆಟ್ಟಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಭಕ್ತರು ಆಗಮಿಸುತ್ತಾರೆ. ಭಕ್ತರು ಸಲ್ಲಿಸಿದ ಕಾಣಿಕೆಯಿಂದಾಗಿ ಮಾದಪ್ಪನ ಹುಂಡಿಯಲ್ಲಿ ಕೋಟ್ಯಂತರ ರೂಪಾಯಿ ಸಂಗ್ರಹವಾಗಿದೆ.



