ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಪ್ರಕರಣದ ತೀರ್ಪು ಪ್ರಕಟವಾಗಿದೆ. ವಿಶೇಷ ನ್ಯಾಯಾಲಯದ ಜಡ್ಜ್ ಸಂತೋಷ್ ಗಜಾನನ ಭಟ್, ಜುಲೈ 29 ರಂದು ವಿಚಾರಣೆ ಪೂರ್ಣಗೊಳಿಸಿ ತೀರ್ಪನ್ನು ಕಾಯ್ದಿರಿಸಿದ್ದರು. ಇದೀಗ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದ್ದಾರೆ.
ಕೆಆರ್ ನಗರ ಸಂತ್ರಸ್ತೆಯ ಅತ್ಯಾಚಾರ ಕೇಸ್‍ನಲ್ಲಿ ವಾದ-ಪ್ರತಿವಾದ ಮುಕ್ತಾಯವಾಗಿ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಕಾಯ್ದಿರಿಸಿತ್ತು. ಕೆಆರ್ ನಗರ ಸಂತ್ರಸ್ತೆ ಪ್ರಕರಣದಲ್ಲಿ ಪ್ರಜ್ವಲ್ ವಿರುದ್ಧ ಅತ್ಯಾಚಾರ, ಅಪಹರಣ ಕೇಸ್ ದಾಖಲಾಗಿತ್ತು. ಇದೀಗ ಅತ್ಯಾಚಾರ ಕೇಸ್‌ನಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಆದೇಶ ಹೊರಡಿಸಿದ್ದಾರೆ.
ಕಳೆದ ಲೋಕಸಭಾ ಚುನಾವಣೆ ವೇಳೆ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿದ್ದ ಅಶ್ಲೀಲ ದೃಶ್ಯಗಳ ಪೆನ್ ಡ್ರೈವ್ ಭಾರೀ ವೈರಲ್ ಆಗಿತ್ತು. ಹೊಳೆನರಸೀಪುರದ ಮಹಿಳೆಯೊಬ್ಬರು ನೀಡಿದ್ದ ದೂರಿನ ಆಧಾರದ ತನಿಖೆ ಆರಂಭವಾಗಿತ್ತು. ಪ್ರಕರಣ ಸಂಬಂಧ 2024ರ ಮೇ 31ರಂದು ಪ್ರಜ್ವಲ್ ರೇವಣ್ಣ ಅವರನ್ನು ಪೊಲೀಸರು ಬಂಧಿಸಿದ್ದರು. ಬಳಿಕ, ಕೆ.ಆರ್.ನಗರದ ಮನೆ ಕೆಲಸದ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡಿದ್ದರು.


