ವಿಜಯಸಾಕ್ಷಿ ಸುದ್ದಿ, ಗದಗ : ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ತಾಪಮಾನ ಏರುತ್ತಿದ್ದು, ಸೂರ್ಯನ ಪ್ರಖರತೆ ಹೆಚ್ಚಾಗಿರುವುದರಿಂದ ಉಂಟಾಗುವ ಸಂಭಾವ್ಯ ಆರೋಗ್ಯದ ಅಪಾಯಗಳನ್ನು ತಗ್ಗಿಸಲು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನೀಲಗುಂದ ಮನವಿ ಮಾಡಿದ್ದಾರೆ.
ಸಾಧ್ಯವಾದಷ್ಟು ಮಟ್ಟಿಗೆ ವಿಶೇಷವಾಗಿ ಗರಿಷ್ಠ ತಾಪಮಾನದ ಅವಧಿಯಲ್ಲಿ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸುವುದು(ಮಧ್ಯಾಹ್ನ 12ರಿಂದ 3 ಗಂಟೆಯವರೆಗೆ), ಸಡಿಲವಾದ ತಿಳಿ ಬಣ್ಣದ ಹತ್ತಿಯ ಬಟ್ಟೆಗಳನ್ನು ಧರಿಸುವುದು, ಬಿಸಿಲಿನಲ್ಲಿ ಹೋಗುವಾಗ ರಕ್ಷಣೆಗಾಗಿ ಛತ್ರಿ, ಕನ್ನಡಕ, ಟೋಪಿ ಮತ್ತು ಕಾಲಿಗೆ ಪಾದರಕ್ಷೆಗಳನ್ನು ಧರಿಸುವುದು, ಹೆಚ್ಚು ನೀರನ್ನು ಕುಡಿಯುವುದು, ಮಜ್ಜಿಗೆ/ಎಳನೀರು, ಹಣ್ಣಿನ ರಸ, ಓಆರ್‌ಎಸ್ ಮುಂತಾದ ದ್ರವ ಪದಾರ್ಥಗಳನ್ನು ಸೇವಿಸುವುದು.
ಹೊರಗಿನ ಉಷ್ಣತೆಯು ಅಧಿಕವಾಗಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸುವುದು. ಪ್ರಯಾಣ ಮಾಡುವಾಗ ನೀರನ್ನು ಜೊತೆಯಲ್ಲಿ ಒಯ್ಯುವುದು, ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಕಾರ್ಬೋನೇಟೆಡ್ ತಂಪು ಪಾನೀಯಗಳ ಸೇವನೆ ತಪ್ಪಿಸುವುದು.
ಬಿಸಿಲಿನಲ್ಲಿ ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಅಥವಾ ಸಾಕು ಪ್ರಾಣಿಗಳನ್ನು ಬಿಡದಿರುವುದು. ಮನೆಯನ್ನು ತಂಪಾಗಿಸಲು ಪರದೆಗಳು, ಮೇಲ್ಛಾವಣಿ ಅಥವಾ ಸನ್‌ಶೇಡ್‌ಗಳನ್ನು ಬಳಸುವುದು. ಬಿಸಿಗಾಳಿ ಮತ್ತು ಅತಿಯಾದ ತಾಪಮಾನದಿಂದ ಆರೋಗ್ಯ ಸಮಸ್ಯೆ ಉಂಟಾದಲ್ಲಿ ಸಮೀಪದ ಆರೋಗ್ಯ ಕೇಂದ್ರವನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ನೀಲಗುಂದ ಕೋರಿದ್ದಾರೆ.