ಮಂಡ್ಯ: ದೀಪಾವಳಿ ಹಬ್ಬದ ಸಂಭ್ರಮದ ನಡುವೆಯೇ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಚಿನಕುರಳಿ ಗ್ರಾಮದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ.

ಗ್ರಾಮದ ವಾಣಿಜ್ಯ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಮೂರು ಅಂಗಡಿಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿದ್ದು, ಅಂಗಡಿ ಮಾಲೀಕರು ಅಪಾರ ನಷ್ಟ ಅನುಭವಿಸಿದ್ದಾರೆ.
ಚಿನಕುರಳಿ ಗ್ರಾಮದ ಮಹದೇವ್ ಎಂಬುವವರಿಗೆ ಸೇರಿದ ವಾಣಿಜ್ಯ ಕಟ್ಟಡದಲ್ಲಿ ಈ ಘಟನೆ ನಡೆದಿದೆ. ಕಟ್ಟಡದಲ್ಲಿದ್ದ ರವಿ ಎಂಬುವವರಿಗೆ ಸೇರಿದ ಪಾತ್ರೆ ಅಂಗಡಿಯಲ್ಲಿ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ವಿಶೇಷ ಪೂಜೆ ನೆರವೇರಿಸಲಾಗಿತ್ತು. ಆದರೆ, ಇಂದು ಮುಂಜಾನೆ ಏಕಾಏಕಿ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ನೋಡನೋಡುತ್ತಿದ್ದಂತೆಯೇ ಬೆಂಕಿ ವ್ಯಾಪಿಸಿ ಪಕ್ಕದಲ್ಲಿದ್ದ ಮೆಡಿಕಲ್ ಸ್ಟೋರ್ ಹಾಗೂ ಪ್ರಾವಿಷನ್ ಸ್ಟೋರ್ಗೂ ಹರಡಿದೆ. ಪರಿಣಾಮ ಮೂರು ಅಂಗಡಿಗಳಲ್ಲಿದ್ದ ಪಾತ್ರೆಗಳು, ಔಷಧಿಗಳು ಹಾಗೂ ದಿನಸಿ ಸಾಮಗ್ರಿಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ. ವಿಷಯ ತಿಳಿದ ತಕ್ಷಣ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ. ಇದರಿಂದ ಕಟ್ಟಡದ ಇತರೆ ಭಾಗಗಳಿಗೆ ಬೆಂಕಿ ಹರಡುವುದು ತಪ್ಪಿದೆ.
ಕ್ಯಾತನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.










