ಫುಕೆಟ್: ಥಾಯ್ಲೆಂಡ್ನ ದಕ್ಷಿಣ ಭಾಗದಲ್ಲಿರುವ ಜನಪ್ರಿಯ ಪ್ರವಾಸಿ ತಾಣ ಫುಕೆಟ್ನಲ್ಲಿ ಸೋಮವಾರ ಮುಂಜಾನೆ ಭೀಕರ ಅಗ್ನಿ ಅವಘಡ ಸಂಭವಿಸಿದೆ. ವಾಣಿಜ್ಯ ಕಟ್ಟಡವೊಂದರಲ್ಲಿ ಕಾಣಿಸಿಕೊಂಡ ಬೆಂಕಿ ಅಕ್ಕಪಕ್ಕದ ಕಟ್ಟಡಗಳಿಗೂ ವ್ಯಾಪಿಸಿದ ಪರಿಣಾಮ 11 ಮಂದಿ ಮೃತಪಟ್ಟಿದ್ದು, 16 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ವಾಹನ ಬಾಡಿಗೆ ವ್ಯವಹಾರ ನಡೆಸುತ್ತಿದ್ದ ಕಟ್ಟಡದಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದೆ. ಬಳಿಕ ಕ್ಷಣಾರ್ಧದಲ್ಲಿ ಬೆಂಕಿ ಸಮೀಪದಲ್ಲಿದ್ದ ಹಲವು ಕಟ್ಟಡಗಳಿಗೂ ವ್ಯಾಪಿಸಿದೆ. ಸೋಮವಾರ ಮುಂಜಾನೆ ಸುಮಾರು 3:17ರ ವೇಳೆಗೆ ಈ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಎರಡು ಗಂಟೆಗಳ ಕಾರ್ಯಾಚರಣೆ ಬಳಿಕ ಬೆಂಕಿ ನಿಯಂತ್ರಣ
ಅಗ್ನಿ ಅವಘಡದ ಮಾಹಿತಿ ದೊರೆಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಸತತ ಎರಡು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದ ಬಳಿಕ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ಆದರೆ ಅಷ್ಟರಲ್ಲಾಗಲೇ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ 11 ಮಂದಿ ಮೃತಪಟ್ಟಿದ್ದು, 16 ಜನರು ಗಾಯಗೊಂಡಿದ್ದಾರೆ.
ಗಾಯಾಳುಗಳಲ್ಲಿ ಥಾಯ್ಲೆಂಡ್ ಮತ್ತು ಮ್ಯಾನ್ಮಾರ್ ಪ್ರಜೆಗಳು
ಗಾಯಗೊಂಡ 16 ಮಂದಿಯಲ್ಲಿ 15 ಮಂದಿ ಥಾಯ್ಲೆಂಡ್ ಪ್ರಜೆಗಳಾಗಿದ್ದು, ಮತ್ತೊಬ್ಬರು ಮ್ಯಾನ್ಮಾರ್ ದೇಶದ ಪ್ರಜೆಯಾಗಿದ್ದಾರೆ. ಈ ಘಟನೆಯಲ್ಲಿ ಮೃತಪಟ್ಟವರು ಅಥವಾ ಗಾಯಗೊಂಡವರ ಪೈಕಿ ಪ್ರವಾಸಿಗರು ಯಾರೂ ಇಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಅಗ್ನಿ ಅವಘಡಕ್ಕೆ ಕಾರಣವೇನು?
ಅಗ್ನಿ ಅವಘಡ ಸಂಭವಿಸಲು ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ವಾಹನ ಬಾಡಿಗೆ ವ್ಯವಹಾರ ನಡೆಸುತ್ತಿದ್ದ ಕಟ್ಟಡದಿಂದಲೇ ಬೆಂಕಿ ಆರಂಭವಾಗಿರುವುದಾಗಿ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಘಟನೆಯ ಕುರಿತು ಅಧಿಕಾರಿಗಳು ತನಿಖೆ ಆರಂಭಿಸಿದ್ದು, ಬೆಂಕಿ ಕಾಣಿಸಿಕೊಳ್ಳಲು ಕಾರಣವೇನು ಎಂಬುದನ್ನು ಪತ್ತೆಹಚ್ಚುತ್ತಿದ್ದಾರೆ.










