ಬೆಂಗಳೂರು: ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದ ಆರೋಪದಡಿ ತಮಿಳುನಾಡು ಮೂಲದ ಮೂವರನ್ನು ಜಿಗಣಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತರಿಂದ ಸುಮಾರು 18 ಲಕ್ಷ ರೂಪಾಯಿ ಮೌಲ್ಯದ 29 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತರನ್ನು ರಾಜಶೇಖರ್ (28), ಚರಣ್ ಕುಮಾರ್ (19) ಹಾಗೂ ಪವನ್ ಕುಮಾರ್ (21) ಎಂದು ಗುರುತಿಸಲಾಗಿದೆ. ಆರೋಪಿಗಳು ನಕಲಿ ಕೀಗಳನ್ನು ಬಳಸಿ ಹಾಗೂ ವಾಹನಗಳ ಹ್ಯಾಂಡಲ್ ಲಾಕ್ ಮುರಿದು ಬೈಕ್ಗಳನ್ನು ಕಳ್ಳತನ ಮಾಡುತ್ತಿದ್ದರು ಎನ್ನಲಾಗಿದೆ.
ನಂತರ ಕದ್ದ ಬೈಕ್ಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡಿ, ಬಂದ ಹಣವನ್ನು ಮೋಜು-ಮಸ್ತಿಗೆ ಬಳಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಖಚಿತ ಮಾಹಿತಿ ಸಂಗ್ರಹಿಸಿದ ಜಿಗಣಿ ಪೊಲೀಸ್ ಇನ್ಸ್ಪೆಕ್ಟರ್ ನವೀನ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಮೂವರನ್ನು ಬಂಧಿಸಿದೆ. ಪ್ರಕರಣದ ಕುರಿತು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.



