ನವದೆಹಲಿ: ರಾಜ್ಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿರುವ ಕೆಪಿಎಸ್ಸಿ ನೇಮಕಾತಿ ಹಗರಣದ ತನಿಖೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ ನೀಡಿದೆ.
ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸುವಂತೆ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು.
ರಾಜ್ಯ ಸರ್ಕಾರದ ಪರ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಿ, ಎಫ್ಐಆರ್ ದಾಖಲಾದ ದಿನದಿಂದಲೂ ಸಿಐಡಿ ಅಧಿಕಾರಿಗಳು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಹೀಗಿರುವಾಗ ಹೈಕೋರ್ಟ್ ಎಸ್ಐಟಿ ರಚನೆಗೆ ಆದೇಶಿಸಿರುವುದನ್ನು ಪ್ರಶ್ನಿಸಿದರು.
ಅಲೋಕ್ ಕುಮಾರ್ ಅವರನ್ನು ಎಸ್ಐಟಿ ಮುಖ್ಯಸ್ಥರನ್ನಾಗಿ ನೇಮಿಸಿರುವುದಕ್ಕೂ ಸರ್ಕಾರದ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದರು.
ವಾದ ಆಲಿಸಿದ ಸುಪ್ರೀಂ ಕೋರ್ಟ್, ನಿರ್ದಿಷ್ಟ ಅಧಿಕಾರಿಯ ನೇಮಕದ ಬಗ್ಗೆ ಆಕ್ಷೇಪವಿದ್ದರೆ ಹೈಕೋರ್ಟ್ನ್ನು ಸಂಪರ್ಕಿಸಬಹುದಿತ್ತು ಎಂದು ಅಭಿಪ್ರಾಯಪಟ್ಟಿತು.
ಅಧಿಕಾರಿ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಮುಂದಿನ ವಿಚಾರಣೆಯಲ್ಲಿ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆ ನ್ಯಾಯಪೀಠ ಸೂಚಿಸಿದೆ. ಅಲ್ಲದೆ, ಎಸ್ಐಟಿ ರಚನೆಗೆ ಸರ್ಕಾರಕ್ಕೆ ಸಮ್ಮತವಿರುವ ಇತರ ಸಮರ್ಥ ಅಧಿಕಾರಿಗಳ ಪಟ್ಟಿಯನ್ನು ನೀಡಲು ಅವಕಾಶ ಕಲ್ಪಿಸಿದೆ.
ಮುಂದಿನ ವಿಚಾರಣೆಯನ್ನು ಅಕ್ಟೋಬರ್ 12ಕ್ಕೆ ಮುಂದೂಡಲಾಗಿದ್ದು, ಅಲ್ಲಿಯವರೆಗೆ ಹೈಕೋರ್ಟ್ ಆದೇಶಕ್ಕೆ ಮಧ್ಯಂತರ ತಡೆ ಮುಂದುವರಿಯಲಿದೆ.



