ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ರೋಣ ಕ್ಷೇತ್ರದ ನಾಲ್ಕು ಬಾರಿ ಶಾಸಕರಾಗಿರುವ ಜಿ.ಎಸ್. ಪಾಟೀಲ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರೋಣ ತಾಲೂಕು ಘಟಕ ಕಾಂಗ್ರೆಸ್ ಹೈಕಮಾಂಡ್‌ಗೆ ಒತ್ತಾಯಿಸಿದೆ.
ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹಾಸಭಾ ತಾಲೂಕು ಅಧ್ಯಕ್ಷ ಅನಿಲಕುಮಾರ ತೆಗ್ಗಿನಕೇರಿ, “ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ವೀರಶೈವ ಲಿಂಗಾಯತ ಸಮುದಾಯದ ಪಾತ್ರ ಮಹತ್ವದ್ದಾಗಿದೆ. ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಜಿ.ಎಸ್. ಪಾಟೀಲ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಸಮುದಾಯಕ್ಕೆ ನ್ಯಾಯ ಒದಗಿಸಬೇಕು” ಎಂದು ಆಗ್ರಹಿಸಿದರು.
“ಸಚಿವ ಸ್ಥಾನ ನೀಡದಿದ್ದರೆ ನಾವು ಬೀದಿಗಿಳಿದು ಹೋರಾಟ ಮಾಡುತ್ತೇವೆ. ಅಗತ್ಯವಿದ್ದರೆ ಕಾಂಗ್ರೆಸ್ ಸದಸ್ಯತ್ವಕ್ಕೂ ರಾಜೀನಾಮೆ ನೀಡಲು ಸಿದ್ಧರಾಗಿದ್ದೇವೆ” ಎಂದು ಅನಿಲಕುಮಾರ ತೆಗ್ಗಿನಕೇರಿ ಎಚ್ಚರಿಕೆ ನೀಡಿದರು.
ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ನಾಯಕತ್ವ ಈ ಹಿಂದೆ ಭರವಸೆ ನೀಡಿದ್ದು, ಈ ಬಾರಿ ಸಚಿವ ಸ್ಥಾನ ನೀಡಲೇಬೇಕು ಎಂದು ಒತ್ತಾಯಿಸಿದರು.
ರೈತರ ಸಮಸ್ಯೆ, ನೀರಾವರಿ ಯೋಜನೆಗಳು, ರಸ್ತೆ ಅಭಿವೃದ್ಧಿ ಹಾಗೂ ಗ್ರಾಮೀಣ ಭಾಗದ ಜನಪರ ಕೆಲಸಗಳಲ್ಲಿ ಜಿ.ಎಸ್. ಪಾಟೀಲ ಅವರು ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಪಕ್ಷ ಸಂಘಟನೆಗೂ ಅಪಾರ ಕೊಡುಗೆ ನೀಡಿರುವ ಅವರಿಗೆ ಸಚಿವ ಸ್ಥಾನ ನೀಡುವುದು ಸೂಕ್ತ ಗೌರವವಾಗಲಿದೆ ಎಂದು ಹೇಳಿದರು.
ಈ ವೇಳೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಮಂಜುಳಾ ರೇವಡಿ ಮಾತನಾಡಿ, “ಹಲವಾರು ಬಾರಿ ಶಾಸಕರಾಗಿ ಆಯ್ಕೆಯಾದ ಜಿ.ಎಸ್. ಪಾಟೀಲ ಅವರಿಗೆ ಸಚಿವ ಸ್ಥಾನ ನೀಡಬೇಕು. ನಮ್ಮ ಶಾಸಕರಿಗೆ ಅನ್ಯಾಯವಾದರೆ ಸಾಮೂಹಿಕ ರಾಜೀನಾಮೆ ನೀಡಲು ಸಹ ಸಿದ್ಧರಾಗಿದ್ದೇವೆ” ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಭೀಮರೆಡ್ಡೆಪ್ಪ ರಡ್ಡೇರ, ಎಂ.ಎಸ್. ಮಲ್ಲಾಪೂರ, ಸಿದ್ದರಾಮಗೌಡ ಜೀವನಗೌಡರ, ಸಿದ್ದು ಗೊಂಗಡಶೆಟ್ಟಿಮಠ, ಶರಣು ಬ್ಯಾಳಿ, ಮಲ್ಲಿಕಾರ್ಜುನ ರಡ್ಡೇರ, ವಿಜಯಗೌಡ ಪಾಟೀಲ, ರೇಣುಕಾ ಧರ್ಮಾಯತ, ಮಂಜುನಾಥ ಅಂಗಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
“ಜಿ.ಎಸ್. ಪಾಟೀಲ ಅವರಿಗೆ ಈ ಬಾರಿ ಸಚಿವ ಸ್ಥಾನ ಸಿಗದಿದ್ದರೆ ನಾವು ಮೌನವಾಗಿರುವುದಿಲ್ಲ. ಅಗತ್ಯವಿದ್ದರೆ ಹೋರಾಟಕ್ಕೂ, ರಾಜೀನಾಮೆಗೂ ಸಿದ್ಧ.”
ಅನಿಲಕುಮಾರ ತೆಗ್ಗಿನಕೇರಿ
ಅಧ್ಯಕ್ಷರು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ, ರೋಣ ತಾಲೂಕು ಘಟಕ



