ಬೆಂಗಳೂರು: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅನಾರೋಗ್ಯಕ್ಕೆ ತುತ್ತಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎನ್ನಲಾಗಿದ್ದು,
ಹಿರಿಯ ವೈದ್ಯರು ಅವರ ಆರೋಗ್ಯದ ಮೇಲೆ ನಿಗಾ ಇರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇನ್ನೂ ಈ ವಿಚಾರಕ್ಕೆ ಸಂಬಂಧಿಸಿದಂತೆ ಪುತ್ರ, ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೇ ನೀಡಿದ್ದಾರೆ. ಈ ಸಂಬಂಧ ಎಕ್ಸ್ ಪೋಸ್ಟ್ ಮಾಡಿರುವ ಅವರು,
ಮಲ್ಲಿಕಾರ್ಜುನ ಖರ್ಗೆ ಅವರು ಹೃದಯದ ಅಸಹಜ ಲಯವನ್ನು ಸರಿಪಡಿಸುವ pacemaker ಅಳವಡಿಸಲು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದ್ದು, ಚೇತರಿಕೆ ಕಾಣುತ್ತಿದ್ದಾರೆ. ಎಲ್ಲರ ಹಾರೈಕೆ ಹಾಗೂ ಕಾಳಜಿಗೆ ಧನ್ಯವಾದಗಳು ಎಂದಿದ್ದಾರೆ.
ಇನ್ನೂ ಖರ್ಗೆ ಅವರ ಆರೋಗ್ಯದ ಸ್ಥಿತಿಗತಿ ಬಗ್ಗೆ ಹೆಚ್ಚಿನ ವಿವರಗಳೊಂದಿಗೆ ಆರೋಗ್ಯ ಬುಲೆಟಿನ್ ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.



