ನವದೆಹಲಿ: ಮಾಲೂರು ಕಾಂಗ್ರೆಸ್ ಶಾಸಕ ಕೆವೈ ನಂಜೇಗೌಡ ವಿರುದ್ಧ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು, ಮತಗಳ ಮರುಎಣಿಕೆ ನಡೆಸಿ ಫಲಿತಾಂಶವನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗೆ ಸೂಚಿಸಿದೆ.
ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಸೂರ್ಯಕಾಂತ್ ನೇತೃತ್ವದ ದ್ವಿ ಸದಸ್ಯ ಪೀಠ, ಶಾಸಕ ಸ್ಥಾನದಿಂದ ಅಸಿಂಧುಗೊಳಿಸಿದ್ದ ಹೈಕೋರ್ಟ್ ಆದೇಶಕ್ಕೆ ಮಧ್ಯಂತರ ತಡೆ ನೀಡಿತು. 4 ವಾರಗಳಲ್ಲಿ ಪ್ರತಿವಾದಿಗಳು ಉತ್ತರಿಸಬೇಕು ಎಂದು ಸೂಚನೆ ನೀಡಿತು.
ಅಲ್ಲದೇ ಮತ ಮರು ಎಣಿಕೆ ನಡೆಸಿ ಫಲಿತಾಂಶ ಮುಚ್ಚಿದ ಲಕೋಟೆಯಲ್ಲಿ ಕೋರ್ಟ್‌ಗೆ ಸಲ್ಲಿಸಬೇಕು ಎಂದು ಕೇಂದ್ರ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿತು. 2023 ಫಲಿತಾಂಶದ ಮರು ಎಣಿಕೆ ಕೋರಿ ಪರಾರ್ಜಿತ ಅಭ್ಯರ್ಥಿ ಮಂಜುನಾಥಗೌಡ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ಹಾಲಿ ಕಾಂಗ್ರೆಸ್ (Congress) ಶಾಸಕ ಕೆ.ವೈ ನಂಜೇಗೌಡ ಅವರ ಶಾಸಕತ್ವವನ್ನು ಅಸಿಂಧು ಮಾಡಿ, ಮತ ಮರು ಎಣಿಕೆಗೆ ಸೂಚನೆ ನೀಡಿತು. ಅಸಿಂಧು ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಒಂದು ತಿಂಗಳ ಸಮಯ ನೀಡಿತ್ತು. ಹೈಕೋರ್ಟ್ ಆದೇಶದಂತೆ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಕೆ.ವೈ ನಂಜೇಗೌಡ ಸದ್ಯ ತಾತ್ಕಲಿಕ ರಿಲಿಫ್ ಪಡೆದಿದ್ದಾರೆ.