ಕೋಲ್ಕತ್ತಾ: ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸುವ ಬೆಳವಣಿಗೆಯಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದೊಳಗಿನ ಬಂಡಾಯ ಬಹಿರಂಗ ಸ್ಫೋಟಗೊಂಡಿದೆ. ಬಂಡಾಯ ಬಣವು ಪಕ್ಷದ ರಾಷ್ಟ್ರೀಯ ಅಧ್ಯಕ್ಷೆಯಾಗಿದ್ದ ಮಮತಾ ಬ್ಯಾನರ್ಜಿ ಅವರನ್ನು ಹುದ್ದೆಯಿಂದ ವಜಾಗೊಳಿಸಿರುವುದಾಗಿ ಘೋಷಿಸಿದ್ದು, ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿದ್ದ ಅಭಿಷೇಕ್ ಬ್ಯಾನರ್ಜಿ ಅವರನ್ನು ಅಮಾನತುಗೊಳಿಸಿರುವುದಾಗಿ ಪ್ರಕಟಿಸಿದೆ.
ಕೋಲ್ಕತ್ತಾದ ನ್ಯೂಟೌನ್ನ ಪಂಚತಾರಾ ಹೋಟೆಲ್ನಲ್ಲಿ ನಡೆದ ವಿಶೇಷ ಸಭೆಯಲ್ಲಿ ಬಂಡಾಯ ನಾಯಕರು ಮಹತ್ವದ ನಿರ್ಣಯಗಳನ್ನು ಕೈಗೊಂಡಿದ್ದಾರೆ. ಬಂಡಾಯ ಬಣದ ನಾಯಕ ರುತಬ್ರತಾ ಬ್ಯಾನರ್ಜಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹಿರಿಯ ಶಾಸಕ ಅರೂಪ್ ರಾಯ್ ಅವರನ್ನು ಟಿಎಂಸಿಯ ಹೊಸ ಅಖಿಲ ಭಾರತ ಅಧ್ಯಕ್ಷರನ್ನಾಗಿ ಘೋಷಿಸಲಾಗಿದೆ.
ಅಭಿಷೇಕ್ ಬ್ಯಾನರ್ಜಿ ಅವರ ಕಾರ್ಯವೈಖರಿಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಬಂಡಾಯ ನಾಯಕರು, ಅವರನ್ನು ಪಕ್ಷದ ಎಲ್ಲಾ ಜವಾಬ್ದಾರಿಗಳಿಂದ ಅಮಾನತುಗೊಳಿಸುವ ನಿರ್ಣಯಕ್ಕೆ ಸರ್ವಾನುಮತದ ಮುದ್ರೆ ಒತ್ತಿದ್ದಾರೆ. ಜೊತೆಗೆ ಪಕ್ಷದ ಸಂಘಟನೆಗೆ ಹೊಸ ರೂಪ ನೀಡಲು 20 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನೂ ರಚಿಸಲಾಗಿದೆ.
ಬಂಡಾಯ ಬಣವು ತಾವುಗಳೇ “ನಿಜವಾದ ತೃಣಮೂಲ ಕಾಂಗ್ರೆಸ್” ಎಂದು ಘೋಷಿಸಿಕೊಂಡಿದ್ದು, ಪಕ್ಷದ ಮೇಲೆ ಹಕ್ಕು ಸ್ಥಾಪಿಸಲು ಚುನಾವಣಾ ಆಯೋಗದ ಮೆಟ್ಟಿಲೇರಲು ಸಿದ್ಧತೆ ನಡೆಸಿದೆ. ಈ ಬೆಳವಣಿಗೆ ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಅತಿದೊಡ್ಡ ಬಿಕ್ಕಟ್ಟಿಗೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ಕಾನೂನು ಮತ್ತು ರಾಜಕೀಯ ಹೋರಾಟ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.



