ಮಂಗಳೂರು: ಇಲ್ಲಿನ ಪಂಪ್ವೆಲ್ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
ಮೃತರನ್ನು ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ನಿವಾಸಿ ಗೋಪಾಲ್ (29) ಎಂದು ಗುರುತಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ 66ರ ನಂತೂರು–ಪಂಪ್ವೆಲ್ ಸರ್ವಿಸ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಮಾಹಿತಿಯ ಪ್ರಕಾರ, ಬೈಕ್ ಸವಾರ ಗೋಪಾಲ್ ಅವರು ಸಂಚರಿಸುತ್ತಿದ್ದ ವೇಳೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದ್ದು, ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನೆಯ ನಂತರ ಸ್ಥಳೀಯರು ಮತ್ತು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಸಂಚಾರಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



