ಕೋಲಾರ:– ಬೆಂಬಲ ಬೆಲೆ ಸಿಗದ ಹಿನ್ನೆಲೆ ಕೋಲಾರದಲ್ಲಿ ಮಾವು ಬೆಳೆಗಾರರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ಇದೇ ವೇಳೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ನಗರದ ಹೊರ ವಲಯದ ಕೊಂಡರಾಜನಹಳ್ಳಿ ಬಳಿ ಬೆಂಗಳೂರು-ಚೆನೈ ರಾಷ್ಟ್ರೀಯ ಹೆದ್ದಾರಿ ತಡೆದು, ಮಾವಿನ ಹಣ್ಣನ್ನು ರಸ್ತೆಯಲ್ಲಿ ಸುರಿದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬೆಂಬಲ ಬೆಲೆ ನೀಡದ ಹಿನ್ನೆಲೆ, ಕಳೆದ 22 ದಿನಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದರು. ಬಂದ್, ಹೋರಾಟ ಮಾಡಿದರೂ ಪ್ರಯೋಜನವಾಗಿಲ್ಲ. ಇದರಿಂದ ಹೆದ್ದಾರಿ ತಡೆದು ರೈತರು ಪ್ರತಿಭಟನೆ ಆರಂಭಿಸಿದ್ದಾರೆ.
ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಹಣವನ್ನು ನೀಡುವಂತೆ ರೈತರು ಒತ್ತಾಯಿಸಿ, ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಶಾಸಕರ ವಿರುದ್ಧ ಧಿಕ್ಕಾರ ಕೂಗಿ ರೈತರು ಆಕ್ರೋಶ ಹೊರಹಾಕುತ್ತಿದ್ದಾರೆ. ಮಾವು ಬೆಳೆಗಾರರನ್ನು ಸರ್ಕಾರ ಬೀದಿಗೆ ತಳ್ಳಿದೆ ಎಂದು ಪ್ರತಿಭಟನಾಕಾರರು ಅಸಮಾಧಾನ ಹೊರಹಾಕಿದ್ದಾರೆ.


