ಬೆಳಗಾವಿ: ಬೆಳಗಾವಿಯ ಸರ್ಕಾರಿ ಆಸ್ಪತ್ರೆಯ ವೈದ್ಯರೊಬ್ಬರ ಮನೆಯಲ್ಲಿ ಗಾಂಜಾ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ಗಾಂಜಾ ಪತ್ತೆ ಹಾಗೂ ಸೇವನೆ ಆರೋಪದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಸಂಬಂಧಪಟ್ಟ ವೈದ್ಯರಿಗೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಿದೆ.
ನಾಲ್ಕು ದಿನಗಳ ಹಿಂದೆ ಬೆಳಗಾವಿ ಮಾಳಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ವೈದ್ಯ ಡಾ. ರಾಹುಲ್ ಬಂತಿ ಅವರ ನಿವಾಸದಲ್ಲಿ ಸುಮಾರು 134 ಗ್ರಾಂ ಗಾಂಜಾ ಪತ್ತೆಯಾಗಿದೆ. ನಂತರ ಅವರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಯಿತಾಗ, ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ ಎಂದು ತಿಳಿದುಬಂದಿದೆ.
ಈ ಹಿನ್ನೆಲೆಯಲ್ಲಿ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಡಾ. ರಾಹುಲ್ ಬಂತಿ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಡಾ. ರಾಹುಲ್ ಬಂತಿ ಅವರು ಪ್ರಸ್ತುತ ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮುಖ್ಯ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಮಕ್ಕಳ ತಜ್ಞ ವೈದ್ಯರಾಗಿದ್ದಾರೆ.
ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಬೆಳಗಾವಿ ಜಿಲ್ಲಾ ಆರೋಗ್ಯಾಧಿಕಾರಿ (ಡಿಎಚ್ಒ) ಡಾ. ಈಶ್ವರ ಗಡಾದ ಡಾ. ರಾಹುಲ್ ಬಂತಿಗೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಿದ್ದಾರೆ.



