ವಿಜಯಸಾಕ್ಷಿ ಸುದ್ದಿ, ಗದಗ: ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಖಂಡಿಸಿ ನಗರದಲ್ಲಿ ಜಿಲ್ಲಾಧ್ಯಕ್ಷ ರಾಜು ಕುರಡಗಿ ನೇತೃತ್ವದಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯ ವೇಳೆ ಬಿಜೆಪಿ ಕಾರ್ಯಕರ್ತರು ಟೈರ್‌ಗೆ ಬೆಂಕಿ ಹಚ್ಚಲು ಮುಂದಾದಾಗ ಪೊಲೀಸರು ಕಸಿದುಕೊಂಡಿದ್ದು, ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ತಳ್ಳಾಟ, ನೂಕಾಟ ನಡೆಯಿತು. ಇದರಿಂದ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿತ್ತು.
ಶುಕ್ರವಾರ ಸಾಯಂಕಾಲ ಗಾಂಧಿ ವೃತ್ತದಲ್ಲಿ ಬಿಜೆಪಿಯಿಂದ ಪ್ರತಿಭಟನೆಗೆ ಕರೆ ನೀಡಲಾಗಿತ್ತು. ಈ ವೇಳೆ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿದ ಪ್ರತಿಭಟನಾಕಾರರು ತಮ್ಮ ಆಕ್ರೋಶ ಹೊರಹಾಕಿದರು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲ ಹಿಂದೂಗಳ ಹತ್ಯೆ ನಡೆಯುತ್ತದೆ. ಆದರೂ ರಾಜ್ಯ ಸರ್ಕಾರ ಇದುವರೆಗೂ ಕೊಲೆಗಾರರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ನೈತಿಕ ಹೊಣೆ ಹೊತ್ತು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಮಾನವ ಸರಪಳಿ ನಿರ್ಮಿಸಿ, ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಪಕ್ಷದ ಹಿರಿಯ ಮುಖಂಡರಾದ ಶ್ರೀಪತಿ ಉಡುಪಿ, ಎಂ.ಎಂ ಹಿರೇಮಠ, ನಗರಸಭೆ ಸದಸ್ಯರಾದ ವಿನಾಯಕ ಮಾನ್ವಿ, ರಾಘವೇಂದ್ರ ಯಳವತ್ತಿ, ಅನಿಲ ಅಬ್ಬಿಗೇರಿ, ದೇವೇಂದ್ರಪ್ಪ ಹೂಗಾರ, ಉಮೇಶ್ ಹಡಪದ, ಮಂಜುನಾಥ ಮುಳುಗುಂದ, ಸುಧೀರ್ ಕಾಟೀಗರ, ವಿಜಯಲಕ್ಷ್ಮೀ ಮಾನ್ವಿ, ನಾಗರಾಜ ಕುಲಕರ್ಣಿ, ಪ್ರಕಾಶ್ ಅಂಗಡಿ, ರಾಘವೇಂದ್ರ ಹಬೀಬ ಮುಂತಾದವರು ಉಪಸ್ಥಿತರಿದ್ದರು.
ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳನ್ನು ಸರ್ಕಾರ ಕೂಡಲೇ ಬಂಧಿಸಬೇಕು. ಜೊತೆಗೆ, ಅವರಿಗೆ ಉಗ್ರ ಶಿಕ್ಷೆ ವಿಧಿಸಬೇಕು. ಕಾಂಗ್ರೆಸ್ ಸರ್ಕಾರ ಮುಸ್ಲಿಂ ತುಷ್ಟೀಕರಣಕ್ಕಾಗಿ ಹಿಂದೂ ಧರ್ಮವನ್ನು ಕೊಲೆ ಮಾಡಲು ಹೊರಟಿದೆ. ಇಂತಹ ಮುಖ್ಯಮಂತ್ರಿಯನ್ನು ಕರ್ನಾಟಕ ರಾಜ್ಯ ಹಿಂದೆಂದೂ ಕಂಡಿರಲಿಲ್ಲ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಿಂದೂಗಳಿಗೆ ರಕ್ಷಣೆ ಇಲ್ಲದಂತಾಗಿದೆ. ರಾಜ್ಯ ಸರ್ಕಾರ ಅತಿಯಾದ ಓಲೈಕೆಯಲ್ಲಿ ತೊಡಗಿದ್ದು, ಪರಿಸ್ಥಿತಿ ಹೀಗೆಯೇ ಮುಂದುವರೆದರೆ ಮುಂದಿನ ದಿನಮಾನಗಳಲ್ಲಿ ರಾಜ್ಯದ ಜನತೆ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುತ್ತಾರೆ.
– ರಾಜು ಕುರುಡಗಿ.
ಬಿಜೆಪಿ ಜಿಲ್ಲಾಧ್ಯಕ್ಷ.