ದೋಹಾ: ವಿಶ್ವದ ಪ್ರಮುಖ ನೈಸರ್ಗಿಕ ಅನಿಲ ರಫ್ತು ರಾಷ್ಟ್ರವಾದ ಕತಾರ್‌ನ ರಾಸ್ ಲಫಾನ್ ಕೈಗಾರಿಕಾ ನಗರದಲ್ಲಿರುವ ಬರ್ಜಾನ್ ಅನಿಲ ಸ್ಥಾವರದಲ್ಲಿ ಭಾರಿ ಸ್ಫೋಟ ಸಂಭವಿಸಿದೆ.
ಹೊಸ ಕಾರ್ಯಾಚರಣೆ ಆರಂಭದ ಹಂತದಲ್ಲಿದ್ದಾಗಲೇ ಈ ದುರಂತ ಸಂಭವಿಸಿದ್ದು, ಕನಿಷ್ಠ 54 ಮಂದಿ ಗಾಯಗೊಂಡಿದ್ದಾರೆ ಹಾಗೂ 18 ಕಾರ್ಮಿಕರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.
ಘಟನೆ ನಡೆದ ತಕ್ಷಣವೇ ತುರ್ತು ರಕ್ಷಣಾ ಪಡೆಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆಯನ್ನು ಆರಂಭಿಸಿದ್ದು, ಸದ್ಯ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೇಶದ ಇಂಧನ ಅಗತ್ಯಗಳನ್ನು ಪೂರೈಸುವ ಪ್ರಮುಖ ಕೇಂದ್ರವಾಗಿರುವ ಈ ಸ್ಥಾವರದಲ್ಲಿ ಕಾರ್ಯಾಚರಣೆ ಆರಂಭವಾಗುತ್ತಿದ್ದಂತೆಯೇ ಸ್ಫೋಟ ಸಂಭವಿಸಿದೆ ಎಂದು ಸರ್ಕಾರಿ ಸ್ವಾಮ್ಯದ ಕತಾರ್ ಎನರ್ಜಿ ಸಂಸ್ಥೆ ದೃಢಪಡಿಸಿದೆ.
ಸ್ಫೋಟದ ಬಳಿಕ ಅವಶೇಷಗಳ ನಡುವೆ ನಾಪತ್ತೆಯಾಗಿರುವ 18 ಕಾರ್ಮಿಕರಿಗಾಗಿ ತೀವ್ರ ಹುಡುಕಾಟ ಮುಂದುವರಿದಿದೆ. ಘಟನೆಯ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ತಾಂತ್ರಿಕ ದೋಷವೇ ಅಥವಾ ಇತರ ಕಾರಣಗಳೇ ಎಂಬುದರ ಕುರಿತು ಉನ್ನತ ಮಟ್ಟದ ತನಿಖೆ ಆರಂಭಿಸಲಾಗಿದೆ.
ಈ ಘಟನೆಯಿಂದ ಜಾಗತಿಕ ಇಂಧನ ಮಾರುಕಟ್ಟೆಯ ಮೇಲೆ ಪರಿಣಾಮ ಬೀರುವ ಆತಂಕ ವ್ಯಕ್ತವಾಗಿದ್ದು, ತೈಲ ಹಾಗೂ ಗ್ಯಾಸ್ ಬೆಲೆಗಳು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಆರ್ಥಿಕ ತಜ್ಞರು ಎಚ್ಚರಿಸಿದ್ದಾರೆ.



