ವಿಜಯಸಾಕ್ಷಿ ಸುದ್ದಿ, ಗದಗ: ಮಹಾಯೋಗಿ ವೇಮನರ ಜಯಂತಿಯನ್ನು ಜನವರಿ 19ರಂದು ಅರ್ಥಪೂರ್ಣವಾಗಿ ಆಚರಿಸಲು ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಮಹಾಯೋಗಿ ವೇಮನರ ಜಯಂತಿ ಕುರಿತು ಜರುಗಿದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೂ ಸಹ ವೇಮನರ ಜಯಂತಿ ಆಚರಣೆಗೆ ಕ್ರಮ ವಹಿಸಬೇಕು. ಶಿಷ್ಟಾಚಾರದನ್ವಯ ಆಮಂತ್ರಣ ಪತ್ರಿಕೆಯನ್ನು ಮುದ್ರಿಸಲು ಕ್ರಮ ವಹಿಸಬೇಕು. ಎಸ್.ಎಸ್.ಎಲ್.ಸಿ, ಪಿ.ಯು.ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಸಮಾಜದ ವಿದ್ಯಾರ್ಥಿಗಳಿಗೆ ಸನ್ಮಾನಿಸುವ ಕಾರ್ಯಕ್ರಮ ಜರುಗಲಿದೆ. ವೇಮನರ ಕುರಿತು ಆಳವಾಗಿ ಅಧ್ಯಯನ ಮಾಡಿದವರನ್ನು ಉಪನ್ಯಾಸಕರನ್ನಾಗಿ ಆಹ್ವಾನಿಸಬೇಕು ಎಂದು ಅವರು ನಿರ್ದೇಶನ ನೀಡಿದರು.
ಮಹಾಯೋಗಿ ವೇಮನರ ಜಯಂತಿಯನ್ನು ಜ. 19ರಂದು ಜಿಲ್ಲಾಡಳಿತ ಹಾಗೂ ಸಮುದಾಯದ ಸಹಯೋಗದೊಂದಿಗೆ ಆಚರಿಸಲಾಗುತ್ತಿದ್ದು, ಸಮುದಾಯದವರು ಹಾಗೂ ಇಲಾಖೆಯವರು ಸಮಾಲೋಚನೆ ನಡೆಸಿದ ನಂತರ ಕಾರ್ಯಕ್ರಮದ ಸ್ಥಳವನ್ನು ನಿಗದಿಪಡಿಸಲಾಗುವುದು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ. ಬಸವರಾಜ ಬಳ್ಳಾರಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ತಹಸೀಲ್ದಾರ ಶ್ರೀನಿವಾಸಮೂರ್ತಿ ಕುಲಕರ್ಣಿ, ಸಮುದಾಯದ ಅಧ್ಯಕ್ಷರು, ಪದಾಧಿಕಾರಿಗಳು, ಹಿರಿಯರು, ಗಣ್ಯರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.



