ವಿಜಯಸಾಕ್ಷಿ ಸುದ್ದಿ, ಗದಗ: ಎಪ್ರಿಲ್ 14ರಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಕ್ರಮ ವಹಿಸಬೇಕೆಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಹಸಿರುಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನರಾಮ್ ಅವರ 118ನೇ ಮತ್ತು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆಯ ಪ್ರಯುಕ್ತ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಸ್ಥಳದ ಸ್ವಚ್ಛತೆ ಕುರಿತು ನಿಗಾ ವಹಿಸಬೇಕು. ಕಾರ್ಯಕ್ರಮದಲ್ಲಿ ಯಾವುದೇ ಲೋಪ-ದೋಷಗಳಾಗದಂತೆ ಅಚ್ಚುಕಟ್ಟಾಗಿ ಜಯಂತಿ ಕಾರ್ಯಕ್ರಮ ಆಚರಿಸಲು ಕ್ರಮ ವಹಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಸೂಚಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ ಮಾತನಾಡಿ, ಎಪ್ರಿಲ್ 14ರಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಹಸಿರುಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನರಾಮ್ ಜಯಂತಿಯ ವೇದಿಕೆ ಕಾರ್ಯಕ್ರಮವನ್ನು ಅಂದು ಬೆಳಿಗ್ಗೆ 11 ಗಂಟೆಗೆ ನಗರದ ಅಂಬೇಡ್ಕರ್ ಸಮುದಾಯ ಭವನದಲ್ಲಿ ಜರುಗಿಸಲಾಗುವುದು. ಜಯಂತಿ ನಿಮಿತ್ತ ಡಾ. ಬಿ.ಆರ್. ಅಂಬೇಡ್ಕರರ ಕುರಿತು ಕವನ ಸಂಕಲನ ಬಿಡುಗಡೆ ಮಾಡಲಾಗುವುದು.
ಜಯಂತಿ ಕುರಿತು ವಿವಿಧೆಡೆ ಬ್ಯಾನರ್ ಅಳವಡಿಕೆಗೆ ಕ್ರಮ ವಹಿಸಲಾಗಿದೆ. ಆಮಂತ್ರಣ ಪತ್ರಿಕೆ ಮುದ್ರಣ ಹಾಗೂ ಉಪನ್ಯಾಸಕರ ಆಯ್ಕೆ ಸೇರಿದಂತೆ ಸಕಲ ಸಿದ್ಧತೆ ಕೈಗೊಳ್ಳಲಾಗುತ್ತಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ನಗರಾಭಿವೃದ್ಧಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಬಸವರಾಜ ಕೊಟ್ಟೂರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಶರಣುಗೋಗೇರಿ, ಭೂ ದಾಖಲೆಗಳ ಇಲಾಖೆ ಅಧಿಕಾರಿ ರುದ್ರಗೌಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್. ನೀಲಗುಂದ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
ಇದಕ್ಕೂ ಮುನ್ನ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯಲ್ಲಿ ಕುಡಿಯುವ ನೀರಿನ ಪೂರೈಕೆ ಕುರಿತು ಪ್ರಗತಿ ಪರಿಶೀಲನೆ ನಡೆಸಿ, ಪ್ರಸ್ತುತ ಬೇಸಿಗೆಯಲ್ಲಿ ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸಬೇಕೆಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರಲ್ಲದೆ, ಸಭೆಗೆ ಆಗಮಿಸುವಾಗ ಅಧಿಕಾರಿಗಳು ತಮ್ಮ ಇಲಾಖೆಗಳಿಗೆ ಸಂಬಂಧಪಟ್ಟಂತೆ ನಿಖರವಾದ ಮಾಹಿತಿ ಒದಗಿಸಬೇಕು. ಕಾಮಗಾರಿಗಳ ಅನುಷ್ಠಾನದಲ್ಲಿ ನಿಷ್ಕಾಳಜಿ ಮಾಡಬಾರದು ಎಂದು ಸೂಚಿಸಿದರು.