ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಜ. 26ರಿಂದ ಮಾರ್ಚ್ 31ರವರೆಗೆ ನಡೆಯುತ್ತಿರುವ ಪ್ಯಾನ್ ಇಂಡಿಯಾ ರಕ್ಷಣೆ ಮತ್ತು ಪುನರ್ವಸತಿ ಅಭಿಯಾನ ಅಂಗವಾಗಿ ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಜನಜಾಗೃತಿ ಕಾರ್ಯಕ್ರಮದ ಉದ್ಘಾಟನೆ ಜರುಗಿತು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡ್ರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಶಾಲೆಯಿಂದ ಹೊರಗುಳಿದ ಮಕ್ಕಳು ಬಾಲಕಾರ್ಮಿಕರಾಗುತ್ತಾರೆ. ಅಲ್ಲದೆ, ಬೇರೆ ಬೇರೆ ಅನೈತಿಕ ಚಟುವಟಿಕೆಗಳಲ್ಲಿ ತೊಡಗುವ ಸಾಧ್ಯತೆ ಇರುತ್ತದೆ. ಬಾಲ ಕಾರ್ಮಿಕರು ಕಂಡುಬರುವ ಕಡೆಗೆ ದಾಳಿ ಮಾಡಿ ಬಾಲಕಾರ್ಮಿಕತೆ ನಿರ್ಮೂಲನೆ ಮಾಡಬೇಕು. ಅಂದಾಗ ಈ ಅಭಿಯಾನವು ಯಶಸ್ವಿಯಾಗುತ್ತದೆ ಎಂದರು.
ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಕ್ಕಳು ದೇವರ ಸಮಾನ. ಮಕ್ಕಳ ಬಾಲ್ಯ ನೆಮ್ಮದಿಯಿಂದ ಕೂಡಿರಬೇಕು. ಬಾಲಕಾರ್ಮಿಕತೆಯನ್ನು ತಡೆಗಟ್ಟಿ ಮಕ್ಕಳ ಉಜ್ವಲ ಭವಿಷ್ಯ ನಿರ್ಮಾಣಕ್ಕಾಗಿ ಅವರಿಗೆ ಗುಣಮಟ್ಟದ ಶಿಕ್ಷಣ ಒದಗಿಸಬೇಕು. ಈ ಪರಿಕಲ್ಪನೆ ನಮ್ಮಲ್ಲಿ ದೃಢವಾಗಿ ನಿಲ್ಲಬೇಕು ಎನ್ನುವ ಉದ್ದೇಶದಿಂದ ಈ ಅಭಿಯಾನವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.
ವಕೀಲರಾದ ಗುರುರಾಜ್ ಗೌರಿ ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಡಿವೈಎಸ್‌ಪಿ ಮುರ್ತುಜಾ ಖಾದ್ರಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀಶೈಲ್ ಸೋಮನಕಟ್ಟಿ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರು, ಬಾಲ ಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕರಾದ ಸಂದೇಶ ಪಾಟೀಲ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಸನಾಯಕ, ಕಾರ್ಮಿಕ ನಿರೀಕ್ಷಕರು, ಮಕ್ಕಳ ಸಹಾಯವಾಣಿ ಕೋಆರ್ಡಿನೇಟರ್, ಸ್ಪಂದನ ಸ್ವಯಂ ಸೇವಾ ಸಂಸ್ಥೆಯವರು, ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.



