ವಿಜಯಸಾಕ್ಷಿ ಸುದ್ದಿ, ಗದಗ: ಐತಿಹಾಸಿಕ ಗದಗ ಜಿಲ್ಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸಲು ಅವಕಾಶ ದೊರೆತಿದೆ. ನಿಕಟಪೂರ್ವ ಎಸ್‌ಪಿ ಬಿ.ಎಸ್. ನೇಮಗೌಡ ಜನಸ್ನೇಹಿಯಾಗಿ ಸೇವೆ ಸಲ್ಲಿಸಿದ್ದಾರೆ. ಅವರಂತೆ ನಾನೂ ಕೂಡ ಕೆಲಸ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಸಾರ್ವಜನಿಕರೊಂದಿಗೆ ಪೊಲೀಸರ ಉತ್ತಮ ಬಾಂಧವ್ಯ, ಸಣ್ಣಪುಟ್ಟ ದೂರುಗಳಿಗೂ ಸೂಕ್ತವಾಗಿ ಸ್ಪಂದಿಸುವುದು ಸೇರಿದಂತೆ ಜಿಲ್ಲೆಯ ಪೊಲೀಸ್ ವ್ಯವಸ್ಥೆಯನ್ನ ಜನಸ್ನೇಹಿಯಾಗಿಸಲು ಆದ್ಯತೆ ನೀಡುತ್ತೇನೆ ಎಂದು ನೂತನ ಪೊಲೀಸ್ ಅಧೀಕ್ಷಕ ರೋಹನ್ ಜಗದೀಶ ಹೇಳಿದರು.
ಬುಧವಾರ ಸಂಜೆ ನಗರದ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.
ಪೊಲೀಸ್ ಇಲಾಖೆ ಜನರೊಂದಿಗೆ ಸದಾ ಜನಸ್ನೇಹಿಯಾಗಿರಬೇಕು. ಇಲಾಖೆ ಎಂದರೆ ಸಾರ್ವಜನಿಕರು ಭಯಪಡಬಾರದು. ಸಾಮಾನ್ಯರೊಂದಿಗೂ ಕೂಡ ಪೊಲೀಸ್ ಇಲಾಖೆ ಉತ್ತಮ ಬಾಂಧವ್ಯ ಹೊಂದಬೇಕು ಎನ್ನುವುದೇ ನನ್ನ ಮೂಲ ಉದ್ದೇಶವಾಗಿದೆ. ಭಾಗಶಃ ಪೊಲೀಸ್ ಠಾಣೆಗೆ ಬರುವವರು ದುಃಖದಲ್ಲಿಯೇ ಬರುತ್ತಾರೆ. ಅವರ ಕಷ್ಟಗಳಿಗೆ ಸಮಾಧಾನದಿಂದ ಸ್ಪಂದನೆ ನೀಡುವುದೇ ನಮ್ಮ ಆದ್ಯ ಕರ್ತವ್ಯವಾಗಿದೆ ಎಂದು ಹೇಳಿದರು.
ಗದಗ ಜಿಲ್ಲೆಯಲ್ಲಿ ಥರ್ಡ್ ಐ ಸೇರಿದಂತೆ ಅನೇಕ ತಂತ್ರಜ್ಞಾನಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ಅವುಗಳನ್ನು ಮುಂದುವರೆಸಿಕೊಂಡು ಹೋಗುತ್ತೇನೆ. ಈಗಾಗಲೇ ಜಿಲ್ಲೆಯ ವಿಷಯವಾಗಿ ಡಿಎಸ್‌ಪಿ, ಪಿಎಸ್‌ಐ, ಇನ್ಸ್‌ಪೆಕ್ಟರ್ ಹಾಗೂ ಇಲಾಖೆಯ ಸಿಬ್ಬಂದಿ ವರ್ಗದವರ ಜೊತೆ ಸುದೀರ್ಘವಾಗಿ ಚರ್ಚೆ ನಡೆಸಿ ಶಾಂತಿ ಕಾಪಾಡುವ ನಿಟ್ಟಿನಲ್ಲಿ ನನ್ನ ಉದ್ದೇಶವನ್ನು ಅವರ ಬಳಿ ಹೇಳಿದ್ದೇನೆ. ರಾತ್ರಿ ವೇಳೆ ಗಸ್ತು ತಿರುಗುವ ಸಿಬ್ಬಂದಿಗಳು ಸರಿಯಾಗಿ ಕಾರ್ಯ ನಿರ್ವಹಿಸುವಂತೆ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.
ಇಂದಿನ ಆಧುನಿಕ ದಿನಮಾನಗಳಲ್ಲಿ ಸಾಮಾಜಿಕ ಜಾಲತಾಣ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತಿದೆ. ಹೀಗಾಗಿ, ಟ್ವಿಟರ್‌ನಲ್ಲಿ ಹೆಚ್ಚು ಸಕ್ರಿಯವಾಗಿ ಜಿಲ್ಲೆಯಲ್ಲಿ ನಡೆಯುವ ಕಾರ್ಯಕ್ರಮಗಳ ಬಗ್ಗೆ ವಿವರವಾಗಿ ಮಾಹಿತಿ ನೀಡಲು ಪ್ರಯತ್ನಿಸಲಾಗುವುದು. ಜಿಲ್ಲೆಯಾದ್ಯಂತ ಪ್ರತಿ ಭಾನುವಾರ ದಲಿತರ ಕಾಲೋನಿಗಳಿಗೆ ಭೇಟಿ ನೀಡಿ ಸಭೆಯನ್ನು ಆಯೋಜಿಸಿ ಅವರ ಕುಂದು-ಕೊರತೆ ಆಲಿಸುತ್ತೇನೆ ಎಂದು ತಿಳಿಸಿದರು.
ಪೊಲೀಸರ ದೈಹಿಕ ಸಾಮರ್ಥ್ಯವನ್ನು ಸುಧಾರಿಸಲು ವಿಶೇಷ ಯೋಜನೆಗಳನ್ನು ರೂಪಿಸಲಾಗುವುದು. ಮುಂದಿನ 2 ತಿಂಗಳಲ್ಲಿ ಬಿಎಂಪಿ (ಬಾಡಿ ಮಾಸ್ ಇಂಡೆಕ್ಸ್) ಬಗ್ಗೆ ವಿಶೇಷ ಗಮನ ಹರಿಸಲಾಗುವುದು ಎಂದು ನೂತನ ಎಸ್‌ಪಿ ರೋಹನ್ ಜಗದೀಶ ತಿಳಿಸಿದರು.
ಎಸ್‌ಪಿ ರೋಹನ್ ಜಗದೀಶ ಪರಿಚಯ
2019ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ರೋಹನ್ ಜಗದೀಶ್, ಬಿಎ, ಎಲ್‌ಎಲ್‌ಬಿ ಪದವೀಧರರು. ಯುಪಿಎಸ್‌ಸಿ ಪರೀಕ್ಷೆಯಲ್ಲಿ 224ನೇ ರ‍್ಯಾಂಕ್ ಗಳಿಸಿದ್ದಾರೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದವರಾದ ರೋಹನ್, ದಕ್ಷಿಣ ಕನ್ನಡದ ಉಪ್ಪಿನಂಗಡಿ ಹಾಗೂ ಶಿವಮೊಗ್ಗ ಜಿಲ್ಲೆಯ ಸಾಗರ ಪೊಲೀಸ್ ಠಾಣೆಗಳಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಬೆಳಗಾವಿ ಡಿಸಿಪಿಯಾಗಿ ಸೇವೆ ಸಲ್ಲಿಸಿದ ನಂತರ ಗದಗ ಜಿಲ್ಲೆಗೆ ಪ್ರಥಮ ಬಾರಿಗೆ ವರಿಷ್ಠಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.
ಗದಗ-ಬೆಟಗೇರಿ ಅವಳಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಇರುವ ರೌಡಿಶೀಟರ್‌ಗಳ ಪರೇಡ್ ನಡೆಸಲಾಗುವುದು. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಇಲಾಖೆಯ ಅಧಿಕಾರಿಗಳಿಗೆ ತಕ್ಷಣವೇ ಸೂಚಿಸುತ್ತೇನೆ. ಅಲ್ಲದೆ, ಸಾಮಾಜಿಕ ಜಾಲತಾಣಗಳಲ್ಲಿ ಗಲಭೆ ಎಬ್ಬಿಸುವ ಪೋಸ್ಟ್ ಹಾಕಿದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು.
– ರೋಹನ್ ಜಗದೀಶ.
ನೂತನ ಜಿಲ್ಲಾ ಪೊಲೀಸ್ ಅಧೀಕ್ಷಕರು.



