ವಿಜಯಸಾಕ್ಷಿ ಸುದ್ದಿ, ಗದಗ : ಜಿಲ್ಲೆಯಲ್ಲಿ ಆಗಸ್ಟ್ 27ರಂದು ಕರ್ನಾಟಕ ಲೋಕಸೇವಾ ಆಯೋಗದಿಂದ 2023-24ನೇ ಸಾಲಿನ ಗೆಜೆಟೆಡ್ ಪ್ರೋಬೇಷನರ್ಸ್ ಗ್ರೂಪ್ ಎ ಮತ್ತು ಬಿ ವೃಂದದ ಹುದ್ದೆಗಳ ಪೂರ್ವಭಾವಿ ಪರೀಕ್ಷೆಗಳು ಜರುಗಲಿದ್ದು, ಪರೀಕ್ಷೆಗಳನ್ನು ಪಾರದರ್ಶಕವಾಗಿ, ಯಾವುದೇ ಅವ್ಯವಹಾರಗಳಿಗೆ ಆಸ್ಪದ ನೀಡದೇ ಸುವ್ಯವಸ್ಥಿತವಾಗಿ ಜರುಗಿಸಬೇಕೆಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಸೂಚಿಸಿದರು.
ಜಿಲ್ಲಾದಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರೋಬೇಷನರ್ಸ್ ಗ್ರೂಪ್ ಎ ಮತ್ತು ಬಿ ವೃಂದದ ಹುದ್ದೆಗಳ ಪೂರ್ವಭಾವಿ ಪರೀಕ್ಷೆಗಳ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪರೀಕ್ಷೆಗಳು ಅಚ್ಚುಕಟ್ಟಾಗಿ ನಡೆಯಲು ಜಿಲ್ಲಾಮಟ್ಟದ ತ್ರಿ-ಸದಸ್ಯ ಸಮಿತಿಯನ್ನುವೀಕ್ಷಕರನ್ನು, ಸ್ಥಳೀಯ ನಿರೀಕ್ಷಣಾಧಿಕಾರಿ ಹಾಗೂ ಮಾರ್ಗಾಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಅಧಿಕಾರಿಗಳು ತಮಗೆ ನಿಗದಿಪಡಿಸಿದ ಕರ್ತವ್ಯಗಳನ್ನು ನಿರ್ವಹಿಸತಕ್ಕದ್ದು. ಪ್ರಶ್ನೆ ಪತ್ರಿಕೆ ಹಾಗೂ ಉತ್ತರ ಪತ್ರಿಕೆಗಳನ್ನು ಕೊಂಡೊಯ್ಯುವ ಸಮಯದಲ್ಲಿ ಉಸ್ತುವಾರಿ ತಂಡಕ್ಕೆ ಅಗತ್ಯ ಬಂದೋಬಸ್ತ್ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ನಿರ್ದೇಶಿಸಿದರು.
ಪರೀಕ್ಷೆಗಳು ಸುಗಮವಾಗಿ ಜರುಗುವ ಮತ್ತು ಶಿಸ್ತು, ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಪರಿಮಿತಿಯೊಳಗೆ ಅಂದು ಬೆಳಿಗ್ಗೆ 8ರಿಂದ ಸಾಯಂಕಾಲ 6 ಗಂಟೆಯವರೆಗೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ. ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಹೊರತುಪಡಿಸಿ ಇತರ ಯಾವುದೇ ವ್ಯಕ್ತಿ ಅಥವಾ ಐದು ಐದಕ್ಕಿಂತ ಹೆಚ್ಚು ಜನರು ಗುಂಪು ಕೂಡುವುದು, ಅಥವಾ ವ್ಯಕ್ತಿಗಳ ಗುಂಪುಗಳ ಪ್ರವೇಶವನ್ನು ಹಾಗೂ ಅನಧಿಕೃತ ವ್ಯಕ್ತಿಗಳಿಗೆ ಪರೀಕ್ಷಾ ಕೇಂದ್ರಗಳ ಪ್ರವೇಶವನ್ನು ನಿರ್ಬಂಧಿಸಿದೆ. ಈ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಝೆರಾಕ್ಸ್ ಅಂಗಡಿ, ಸೈಬರ್ ಸೆಂಟರ್, ಬುಕ್‌ಸ್ಟಾಲ್, ಫೋಟೋ ಕಾಪಿಯರ್‌ಗಳನ್ನು ಬಂದ್ ಮಾಡಲು ಆದೇಶಿಸಿದೆ.
ಕರ್ನಾಟಕ ಲೋಕಸೇವಾ ಆಯೋಗವು ಅಭ್ಯರ್ಥಿಗಳ ಪ್ರವೇಶ ಪತ್ರದಲ್ಲಿ ತಿಳಿಸಿರುವ ವಸ್ತç ಸಂಹಿತೆಯನ್ನು ಅಭ್ಯರ್ಥಿಗಳು ಕಡ್ಡಾಯವಾಗಿ ಪಾಲಿಸಬೇಕು. ಆಯೋಗವು ನಿಗದಿಪಡಿಸಿರುವ ಸೂಚನೆಗಳನ್ನು ಸಂಬಂಧಪಟ್ಟವರು ಪರೀಕ್ಷಾ ಕೇಂದ್ರದಲ್ಲಿ ಕಡ್ಡಾಯವಾಗಿ ಪಾಲಿಸತಕ್ಕದ್ದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಜಿಲ್ಲಾ ಸಂಖ್ಯಾಸಂಗ್ರಹಣಾಧಿಕಾರಿ ಎ.ಎ. ಕಂಬಾಳಿಮಠ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಿ.ಎಲ್. ಬಾರಾಟಕ್ಕೆ, ಪರೀಕ್ಷಾ ಕಾರ್ಯಕ್ಕೆ ನಿಯೋಜಿತರಾಗಿರುವ ಅಧಿಕಾರಿಗಳು, ಮೇಲ್ವಿಚಾರಕರು, ಸಮನ್ವಯ ಅಧಿಕಾರಿಗಳು ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಬಿ.ಎಸ್. ನೇಮಗೌಡ ಮಾತನಾಡಿ, ಪರೀಕ್ಷೆಗಳು ಪಾರದರ್ಶಕವಾಗಿ ಜರುಗಬೇಕು ಎನ್ನುವ ಹಿತದೃಷ್ಟಿಯಿಂದಲೇ ಪರೀಕ್ಷಾರ್ಥಿಗಳನ್ನು ಕಟ್ಟುನಿಟ್ಟಾಗಿ ತಪಾಸಣೆಗೊಳಪಡಿಸಲಾಗುತ್ತದೆ. ಪರೀಕ್ಷಾ ಕೊಠಡಿಯಿಂದ ಯಾವುದೇ ಪ್ರಶ್ನೆ ಪತ್ರಿಕೆ /ಓಎಂಆರ್ ಉತ್ತರ ಹಾಳೆ/ಪ್ರಶ್ನೆ ಸಹಿತ ಉತ್ತರ ಪುಸ್ತಿಕೆ ಹೊರಹೋಗದಂತೆ ಜಾಗೃತೆ ವಹಿಸಿ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.


