ವಿಜಯಸಾಕ್ಷಿ ಸುದ್ದಿ, ಗದಗ: ಕೆ.ಎಲ್.ಇ. ಸಂಸ್ಥೆಯ ಆಶ್ರಯದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆ ಶಿಬಿರದ ಉದ್ಘಾಟನಾ ಕಾರ್ಯಕ್ರಮ ಜುಲೈ 17ರಂದು ಬೆಳಿಗ್ಗೆ 10.30ಕ್ಕೆ ನಗರದ ಕೆ.ಎಲ್.ಇ. ಜೆ.ಟಿ. ಕಾಲೇಜಿನ ಸಭಾಭವನದಲ್ಲಿ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಕರೆ ನೀಡಿದರು.
ನಗರದ ಪತ್ರಿಕಾಭವನದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆ.ಎಲ್.ಇ. ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರ, ಕಾಹೇರ ಬೆಳಗಾವಿ, ಕೆ.ಎಲ್.ಇ. ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರ, ಹುಬ್ಬಳ್ಳಿ ಸೇರಿದಂತೆ ವಿವಿಧ ಆಸ್ಪತ್ರೆಗಳ ಸಹಯೋಗದಲ್ಲಿ ಶಿಬಿರ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಗದಗ ತಾಲೂಕಿನ ಸುಮಾರು 50 ಗ್ರಾಮಗಳಿಂದ 10 ಸಾವಿರಕ್ಕೂ ಅಧಿಕ ಜನರು ಭಾಗವಹಿಸುವ ನಿರೀಕ್ಷೆಯಿದ್ದು, ಈಗಾಗಲೇ 8 ಸಾವಿರಕ್ಕೂ ಹೆಚ್ಚು ಮಂದಿ ಆನ್‌ಲೈನ್‌ನಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ. ಸ್ಥಳದಲ್ಲಿಯೇ ನೋಂದಣಿಗೆ ಅವಕಾಶ ಕಲ್ಪಿಸಲಾಗಿದ್ದು, ಅದಕ್ಕಾಗಿ 20 ಪ್ರತ್ಯೇಕ ಕೌಂಟರ್‌ಗಳನ್ನು ತೆರೆಯಲಾಗಿದೆ ಎಂದರು.
ಶಿಬಿರದಲ್ಲಿ ಹೃದಯ, ಮೂಳೆ-ಕೀಲು, ಮೂತ್ರಪಿಂಡ, ಸಾಮಾನ್ಯ ಶಸ್ತ್ರಚಿಕಿತ್ಸೆ, ಕಿವಿ-ಮೂಗು-ಗಂಟಲು, ಕಣ್ಣಿನ, ಸ್ತ್ರೀರೋಗ ಮತ್ತು ಪ್ರಸೂತಿ, ಮಕ್ಕಳ, ಚರ್ಮ, ನರರೋಗ, ಪ್ಲಾಸ್ಟಿಕ್ ಶಸ್ತ್ರಚಿಕಿತ್ಸೆ, ಕ್ಯಾನ್ಸರ್, ದಂತ, ಮನೋವೈದ್ಯಕೀಯ, ಭೌತಿಕ ಚಿಕಿತ್ಸೆ, ಆಯುರ್ವೇದ ಹಾಗೂ ಹೋಮಿಯೋಪತಿ ಸೇರಿದಂತೆ ವಿವಿಧ ವಿಭಾಗಗಳ ತಜ್ಞ ವೈದ್ಯರು ಉಚಿತ ತಪಾಸಣೆ ನಡೆಸಿ ಅಗತ್ಯ ಔಷಧ ವಿತರಿಸಲಿದ್ದಾರೆ. ಅಗತ್ಯವಿರುವ ರೋಗಿಗಳನ್ನು ಶಸ್ತ್ರಚಿಕಿತ್ಸೆಗೆ ಆಯ್ಕೆ ಮಾಡಲಾಗುವುದು ಎಂದು ಹೇಳಿದರು.
ಶಿಬಿರದ ಉದ್ಘಾಟನಾ ಸಮಾರಂಭದ ಸಾನ್ನಿಧ್ಯವನ್ನು ಜಗದ್ಗುರು ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ವಹಿಸಲಿದ್ದು, ಕೆ.ಎಲ್.ಇ. ಸಂಸ್ಥೆಯ ಮಾಜಿ ನಿರ್ದೇಶಕ ಶಂಕ್ರಣ್ಣ ಮುನವಳ್ಳಿ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಾಸಕ ಎಚ್.ಕೆ. ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ಎಸ್.ವಿ. ಸಂಕನೂರ ಹಾಗೂ ಡಿ.ಆರ್. ಪಾಟೀಲ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಮತ್ತು ಡಾ. ಎಚ್.ಎಸ್. ನೀಲಗುಂದ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಎಸ್.ಬಿ. ಸಂಶಿಮಠ, ಆರ್.ಟಿ. ಪವಾಡಶೆಟ್ಟರ್, ಅಶೋಕ ನಿಲೂಗಲ್, ಬಿ.ಜಿ. ಶೆಲ್ಲಿಕೇರಿ, ರಜನಿ ಪಾಟೀಲ ಹಾಗೂ ಡಾ. ಅಲ್ಲಮಪ್ರಭು ಕುಡಚಿ ಉಪಸ್ಥಿತರಿದ್ದರು.



