ಬೆಂಗಳೂರು: ರಾಜ್ಯದಲ್ಲಿ ಸೈಬರ್ ಅಪರಾಧಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಮ್ಯೂಲ್ ಅಕೌಂಟ್‌ಗಳ ಮೂಲಕ ನಡೆಯುತ್ತಿದ್ದ ಭಾರೀ ಸೈಬರ್ ವಂಚಕ ದಂಧೆಯನ್ನು ಸಿಐಡಿ ಸೈಬರ್ ಕ್ರೈಂ ವಿಭಾಗ ಭೇದಿಸಿದೆ.
ನೂರಾರು ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ ಸಿಐಡಿ ತಂಡ, ಈ ಕೃತ್ಯಕ್ಕೆ ಬಳಸಲಾಗುತ್ತಿದ್ದ 40,000ಕ್ಕೂ ಹೆಚ್ಚು ಮ್ಯೂಲ್ ಅಕೌಂಟ್‌ಗಳನ್ನು ಪತ್ತೆಹಚ್ಚಿದೆ. ಸಿಐಡಿ ತಂಡವು ರಾಜ್ಯಾದ್ಯಂತ 100ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಿ ಈ ಪ್ರಕರಣದ ಪ್ರಮುಖ 13 ಮಾಸ್ಟರ್ ಮೈಂಡ್‌ಗಳನ್ನು ಬಂಧಿಸಿದೆ. ತನಿಖೆ ವೇಳೆ ತಿಳಿದುಬಂದಂತೆ, ಅಮಾಯಕರ ಬ್ಯಾಂಕ್ ಖಾತೆಗಳು, ಎಟಿಎಂ ಕಾರ್ಡ್‌ಗಳು ಹಾಗೂ ಖಾತೆ ವಿವರಗಳನ್ನು ಹಣದ ಹಿತಾಸಕ್ತಿಗಾಗಿ ಸಂಗ್ರಹಿಸಿ ಸೈಬರ್ ವಂಚಕರಿಗೆ ನೀಡಲಾಗುತ್ತಿತ್ತು. ಮ್ಯೂಲ್ ಅಕೌಂಟ್‌ಗಳ ಮೂಲಕ ಆನ್‌ಲೈನ್ ವಂಚನೆ ನಡೆಸಿ ಹಣ ವರ್ಗಾವಣೆ ಹಾಗೂ ಎಟಿಎಂ ಮೂಲಕ ನಗದು ವಿತ್‌ಡ್ರಾ ಮಾಡಲಾಗುತ್ತಿತ್ತು.
ಖಾತೆ ವಿವರಗಳನ್ನು ಒದಗಿಸಿದವರಲ್ಲಿ ವಂಚನೆಯ ಬಗ್ಗೆ ಯಾವುದೇ ಅರಿವು ಇರಲಿಲ್ಲ ಎಂದು ಸಿಐಡಿ ತಿಳಿಸಿದೆ. ಈ ದಾಳಿಯ ವೇಳೆ ಸುಮಾರು 42,000 ಮ್ಯೂಲ್ ಅಕೌಂಟ್‌ಗಳು ಬಳಸಲಾಗುತ್ತಿದ್ದು, ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ಮುಂದುವರಿಯುತ್ತಿದೆ.



