HomeGadag Newsಕ್ರೀಡಾಸಕ್ತಿಯದಿಂದ ಮಾನಸಿಕ, ದೈಹಿಕ ಸದೃಢತೆ: ಎಸ್.ವಿ. ಸಂಕನೂರ

ಕ್ರೀಡಾಸಕ್ತಿಯದಿಂದ ಮಾನಸಿಕ, ದೈಹಿಕ ಸದೃಢತೆ: ಎಸ್.ವಿ. ಸಂಕನೂರ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಸರ್ಕಾರದ ಯೋಜನೆಗಳನ್ನು ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರುವಲ್ಲಿ ಸರ್ಕಾರಿ ನೌಕರರ ಪಾತ್ರ ಮಹತ್ವದ್ದಾಗಿದೆ. ನೌಕರರು ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಂಡು ತಮ್ಮ ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಕಾಪಾಡಿಕೊಂಡಾಗ ಮಾತ್ರ ಸರಿಯಾಗಿ ಕಚೇರಿ ಕೆಲಸ ನಿರ್ವಹಿಸಲು ಸಾಧ್ಯವಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ತಿಳಿಸಿದರು.

ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಗದಗ ಜಿಲ್ಲಾ ಶಾಖೆ ಇವರ ಸಹಯೋಗದಲ್ಲಿ 2025-26ನೇ ಸಾಲಿನ `ಸರ್ಕಾರಿ ನೌಕರರ ಕ್ರೀಡಾ ಮತ್ತು ಸಾಂಸ್ಕೃತಿಕ ಹಬ್ಬ’ ಗದಗ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಸಮಾರಂಭವನ್ನು ಉದ್ಘಾಟಿಸಿ, ಕ್ರೀಡಾ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸರ್ಕಾರದ ಧ್ಯೇಯೋದ್ದೇಶಗಳನ್ನು ಸಾರ್ವಜನಿಕರಿಗೆ ತಲುಪಿಸುವಲ್ಲಿ ಸರ್ಕಾರಿ ನೌಕರರು ಕೊಂಡಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸರ್ಕಾರಿ ನೌಕರರಿಗೆ ಈ ಕ್ರೀಡಾ ಉತ್ಸವವು ಒಂದು ಸಂತಸದ ಅವಕಾಶವನ್ನು ಕೊಟ್ಟಿದೆ. ಸಾಂಸ್ಕೃತಿಕ ಹಾಗೂ ಮನೋರಂಜನಾ ಕಾರ್ಯಕ್ರಮಗಳೂ ಸಹಿತ ನೌಕರರಿಗೆ ಮಾನಸಿಕ ಸದೃಢತೆ ತಂದುಕೊಡುತ್ತವೆ. ನಿರ್ಣಾಯಕರುಗಳ ನಿರ್ಣಯಗಳಿಗೆ ಬದ್ಧರಾಗಿ ನೌಕರರು ಕ್ರೀಡಾಕೂಟದಲ್ಲಿ ಪಾಲ್ಗೊಂಡು ಗದಗ ಜಿಲ್ಲೆಗೆ ಹೆಸರು ತರಬೇಕೆಂದು ತಿಳಿಸಿದರು.

ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ ಮಾತನಾಡಿ, ನೌಕರರು ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ಮೂಲಕ ದೈಹಿಕ ಹಾಗೂ ಮಾನಸಿಕ ಸದೃಢತೆ ಹೊಂದಬೇಕು. ಜಿಲ್ಲೆಯ ಅನೇಕ ಕ್ರೀಡಾಪಟುಗಳು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿದ್ದಾರೆ ಎಂದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಡಾ. ಬಸವರಾಜ ವೆಂ. ಬಳ್ಳಾರಿ ಪ್ರಾಸ್ತಾವಿಕವಾಗಿ ಮಾತನಾಡಿ, ಗದಗ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ನೌಕರರು ತಮ್ಮ ಕುಟುಂಬದವರೊಂದಿಗೆ ಆಗಮಿಸಿ ಕಾರ್ಯಕ್ರಮಗಳನ್ನು ಆಸ್ವಾದಿಸಬೇಕು. ಎಲ್ಲ ಕ್ರೀಡಾಪಟುಗಳು ಕ್ರೀಡಾಕೂಟದ ಸದುಪಯೋಗ ಪಡೆದುಕೊಳ್ಳಬೇಕೆಂದರು.

ಇದೇ ಸಂದರ್ಭದಲ್ಲಿ ವಿವಿಧ ಇಲಾಖೆಗಳಿಂದ ನಿರ್ಮಿಸಲಾದ ಮಳಿಗೆಗಳನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮದಲ್ಲಿ ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್, ಜಿ.ಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಎಸ್.ಎನ್. ಬಳ್ಳಾರಿ, ರಾಜು ಕುರಡಗಿ, ಪ್ರೇಮನಾಥ ಗರಗ, ರವಿ ಗುಂಜೀಕರ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಗೌರವಾಧ್ಯಕ್ಷ ಡಿ.ಎಸ್. ತಳವಾರ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಹಾಗೂ ತಾಲೂಕಾ ಘಟಕಗಳ ಅಧ್ಯಕ್ಷರು, ಉಪಾಧ್ಯಕ್ಷರು, ಪದಾಧಿಕಾರಿಗಳು, ಗಣ್ಯರು ಹಾಜರಿದ್ದರು.

ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಶರಣು ಗೋಗೇರಿ ಸ್ವಾಗತಿಸಿದರು. ಎಂ.ಎಸ್. ಕುಚಬಾಳ ವಂದಿಸಿದರು. ಪ್ರೊ. ಬಾಹುಬಲಿ ಜೈನರ್ ಕಾರ್ಯಕ್ರಮ ನಿರೂಪಿಸಿದರು.

ಸರ್ಕಾರಿ ನೌಕರರ ಇಡೀ ಕುಟುಂಬವು ಅವರ ಮೇಲೆ ಅವಲಂಬಿತವಾಗಿರುತ್ತದೆ. ಒಂದು ವೇಳೆ ಕಚೇರಿ ಕೆಲಸದ ಅತಿಯಾದ ಒತ್ತಡದಿಂದ ನೌಕರರಿಗೆ ಆರೋಗ್ಯ ಸಮಸ್ಯೆ ಉಂಟಾದಲ್ಲಿ ಅವರ ಕುಟುಂಬವು ಸಂಕಷ್ಟಕ್ಕೆ ಒಳಗಾಗುತ್ತದೆ. ಈ ನಿಟ್ಟಿನಲ್ಲಿ ಅವರು ಕೆಲಸದ ಒತ್ತಡದಿಂದ ಹೊರಬಂದು ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕಾದರೆ ಕನಿಷ್ಠ 1 ತಾಸು ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು ಅಥವಾ ಯೋಗ, ಧ್ಯಾನ, ವಾಕಿಂಗ್, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಪಾಲ್ಗೊಂಡು ಒತ್ತಡಮುಕ್ತ ವಾತಾವರಣ ನಿರ್ಮಿಸಿಕೊಳ್ಳಬೇಕು ಎಂದು ಎಸ್.ವಿ. ಸಂಕನೂರ ತಿಳಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!