HomeKarnataka Newsಮಾನಸಿಕ ಅಸ್ವಸ್ಥನನ್ನು ಬೆತ್ತಲೆಗೊಳಿಸಿ ಥಳಿಸಿದ ಪ್ರಕರಣ: ಸರ್ಕಾರ, ಪೊಲೀಸರ ವಿರುದ್ಧ ಹೈಕೋರ್ಟ್ ಕಿಡಿ

ಮಾನಸಿಕ ಅಸ್ವಸ್ಥನನ್ನು ಬೆತ್ತಲೆಗೊಳಿಸಿ ಥಳಿಸಿದ ಪ್ರಕರಣ: ಸರ್ಕಾರ, ಪೊಲೀಸರ ವಿರುದ್ಧ ಹೈಕೋರ್ಟ್ ಕಿಡಿ

For Dai;y Updates Join Our whatsapp Group

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಮಸಣಾಪುರ ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅವಮಾನ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಮಾನಸಿಕ ಅಸ್ವಸ್ಥ ಯುವಕನನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ತಮ್ಮ ವಿರುದ್ಧ ಯಳಂದೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದುಪಡಿಸುವಂತೆ ಕೋರಿ ಚಾಮರಾಜನಗರ ತಾಲೂಕಿನ ಮಸಣಾಪುರ ಗ್ರಾಮದ ಚಂದ್ರು ಬಿನ್ ಶಿವಣ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ಪೊಲೀಸರ ನಡೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯ ಹೇಳಿಕೆಗಳನ್ನು ಪ್ರಶ್ನಿಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತು.

ವಿಚಾರಣೆ ವೇಳೆ ನ್ಯಾಯಪೀಠ, “ಇವರು ಪೊಲೀಸ್ ಅಧಿಕಾರಿಯೋ ಅಥವಾ ರಾಜಕಾರಣಿಯೋ? ರಾಜ್ಯದಲ್ಲಿ ಕಾನೂನಿನ ಪ್ರಕಾರ ಆಡಳಿತ ನಡೆಯುತ್ತಿದೆಯೇ ಅಥವಾ ವ್ಯಕ್ತಿಯೊಬ್ಬರ ಆದೇಶದಂತೆ ನಡೆಯುತ್ತಿದೆಯೇ? ಆರೋಪಿಯನ್ನು ಗಡಿಪಾರು ಮಾಡುತ್ತೇನೆ, ರೌಡಿ ಶೀಟರ್ ತೆರೆಯುತ್ತೇನೆ ಎಂದು ಬಹಿರಂಗವಾಗಿ ಹೇಳಿಕೆ ನೀಡುವುದು ಪೊಲೀಸ್ ಅಧಿಕಾರಿಗೆ ಶೋಭೆಯಲ್ಲ. ಹಾಗಿದ್ದರೆ ಖಾಕಿ ಸಮವಸ್ತ್ರ ಬಿಚ್ಚಿ ರಾಜಕಾರಣಿಯ ಬಟ್ಟೆ ಹಾಕಿಕೊಳ್ಳಲಿ. ಪ್ರಜಾಪ್ರಭುತ್ವದಲ್ಲಿ ಇಂತಹ ವರ್ತನೆ ಸಹಿಸಲು ಸಾಧ್ಯವಿಲ್ಲ” ಎಂದು ಕಿಡಿಕಾರಿತು.

ಇದೇ ವೇಳೆ, “ಒಬ್ಬ ಯುವಕನನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಥಳಿಸುವುದು ಎಂದರೆ ಏನರ್ಥ? ಇಂತಹ ಅಮಾನವೀಯ ಘಟನೆಗಳು ಈ ದೇಶದಲ್ಲಿ ನಿಂತುಹೋಗಿ ಎಷ್ಟೋ ವರ್ಷಗಳಾಗಿವೆ. ಪ್ರಜಾಪ್ರಭುತ್ವದಲ್ಲಿ ಇಂತಹ ಕೃತ್ಯಗಳು ಅಕ್ಷಮ್ಯ” ಎಂದು ನ್ಯಾಯಪೀಠ ತೀವ್ರ ಅಸಮಾಧಾನ ವ್ಯಕ್ತಪಡಿಸಿತು.

ಪ್ರಕರಣಕ್ಕೆ ಸಂಬಂಧಿಸಿದ ದೂರು ಹಾಗೂ ಪ್ರತಿದೂರುಗಳ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚಿಸಿರುವ ಹೈಕೋರ್ಟ್, ವಿಚಾರಣೆಯನ್ನು ಆಗಸ್ಟ್ 20ಕ್ಕೆ ಮುಂದೂಡಿದೆ.

ಅರ್ಜಿದಾರರ ಪರ ವಕೀಲರು, ಸುಮಾರು 100ಕ್ಕೂ ಹೆಚ್ಚು ಜನರ ಗುಂಪು ಮಾನಸಿಕ ಅಸ್ವಸ್ಥ ಯುವಕನನ್ನು ಕಲ್ಲಿನ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದೆ. ನಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಡಿಪಾರು, ರೌಡಿ ಶೀಟರ್ ಹಾಗೂ ಗೂಂಡಾ ಕಾಯ್ದೆಯಡಿ ಕ್ರಮ ಕೈಗೊಳ್ಳುವುದಾಗಿ ಸಾರ್ವಜನಿಕವಾಗಿ ಬೆದರಿಕೆ ಹಾಕಿದ್ದಾರೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು.

ಇದಕ್ಕೆ ಸರ್ಕಾರದ ಪರ ವಕೀಲರು ಪ್ರತಿಕ್ರಿಯಿಸಿ, ಇದು ದೂರು ಮತ್ತು ಪ್ರತಿದೂರು ದಾಖಲಾಗಿರುವ ಪ್ರಕರಣವಾಗಿದ್ದು, ಯಾರನ್ನೂ ರಕ್ಷಿಸುವ ಉದ್ದೇಶ ಇಲ್ಲ. ಎಸ್‌ಪಿ ಅವರ ಹೇಳಿಕೆಯನ್ನು ನಕಾರಾತ್ಮಕವಾಗಿ ಪರಿಗಣಿಸಬಾರದು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.

ಪ್ರಕರಣದ ಹಿನ್ನೆಲೆ ಪ್ರಕಾರ, ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅವಮಾನ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಸ್ಥಳೀಯರು ಯುವಕನನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ್ದರು. ಬಳಿಕ ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳು ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು. ಈ ಎಫ್‌ಐಆರ್‌ ರದ್ದುಪಡಿಸುವಂತೆ ಅರ್ಜಿದಾರರು ಹೈಕೋರ್ಟ್ ಮೊರೆ ಹೋಗಿದ್ದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img