ಮಂಡ್ಯ: ರಾಜ್ಯದಲ್ಲಿ ಹಾಲಿನ ದರ ಪರಿಷ್ಕರಣೆಗೆ ಸಂಬಂಧಿಸಿದಂತೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಮಹತ್ವದ ಮಾಹಿತಿ ನೀಡಿದ್ದಾರೆ. ವಿಧಾನ ಪರಿಷತ್ ಚುನಾವಣೆ ಮುಗಿದ ಬಳಿಕ ಅಕ್ಟೋಬರ್ 27ರಂದು ಹಾಲಿನ ಪರಿಷ್ಕೃತ ದರ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ಹೊಸ ದರದ ಅಧಿಕೃತ ಘೋಷಣೆ ವಿಳಂಬವಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
ಮಂಡ್ಯ ಜಿಲ್ಲೆಯ ಗಣಂಗೂರು ಟೋಲ್ ಬಳಿ ಕಬ್ಬಿಗೆ ಬೆಂಬಲ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ನಡೆಸಿದ ಬೃಹತ್ ಪ್ರತಿಭಟನೆಯ ಸಂದರ್ಭದಲ್ಲಿ ಮಾತನಾಡಿದ ಚಲುವರಾಯಸ್ವಾಮಿ, ಹಾಲಿನ ದರ ಪರಿಷ್ಕರಣೆ ಕುರಿತು ಈಗಾಗಲೇ ಸೂಕ್ತ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ದರ ಪರಿಷ್ಕರಣೆಯ ಬಗ್ಗೆ ಅಧಿಕೃತ ಘೋಷಣೆ ಮಾಡಲು ಸಾಧ್ಯವಾಗಿಲ್ಲ. ನೀತಿ ಸಂಹಿತೆ ತೆರವಾದ ಬಳಿಕ ಅಕ್ಟೋಬರ್ 27ರಂದು ಹೊಸ ದರವನ್ನು ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ. ಆದರೆ, ಹಾಲಿನ ದರ ಎಷ್ಟು ರೂಪಾಯಿ ಹೆಚ್ಚಾಗಲಿದೆ ಎಂಬುದರ ಕುರಿತು ಸಚಿವರು ಯಾವುದೇ ಸ್ಪಷ್ಟ ಮಾಹಿತಿ ನೀಡಿಲ್ಲ.
ಇದೇ ವೇಳೆ ಪ್ರತಿ ಟನ್ ಕಬ್ಬಿಗೆ ಕನಿಷ್ಠ 5,500 ರೂಪಾಯಿ ದರ ನಿಗದಿಪಡಿಸಬೇಕು ಎಂದು ಆಗ್ರಹಿಸಿ ನೂರಾರು ರೈತರು ಮೈಸೂರು–ಬೆಂಗಳೂರು ದಶಪಥ ಹೆದ್ದಾರಿಯ ಗಣಂಗೂರು ಟೋಲ್ ಬಳಿ ಬೃಹತ್ ಪ್ರತಿಭಟನೆ ನಡೆಸಿದರು.
ಹೆದ್ದಾರಿಯಲ್ಲಿ ವಾಹನ ಸಂಚಾರ ತಡೆದು ರೈತರು ಆಕ್ರೋಶ ವ್ಯಕ್ತಪಡಿಸಿದ್ದರಿಂದ ಸಂಚಾರ ವ್ಯವಸ್ಥೆಯಲ್ಲಿ ತೀವ್ರ ವ್ಯತ್ಯಯ ಉಂಟಾಯಿತು. ಪ್ರತಿಭಟನೆಯ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಸಚಿವ ಚಲುವರಾಯಸ್ವಾಮಿ, ರೈತರ ಸಮಸ್ಯೆಗಳನ್ನು ಆಲಿಸಿದರು. ಕಬ್ಬು ಬೆಳೆಗಾರರ ಬೇಡಿಕೆ ನ್ಯಾಯಯುತವಾಗಿದೆ ಎಂದು ಅಭಿಪ್ರಾಯಪಟ್ಟ ಅವರು, ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಭರವಸೆ ನೀಡಿದರು.
ಅಕ್ಟೋಬರ್ 26ರಂದು ಬೆಳಗಾವಿಯ ಸುವರ್ಣಸೌಧದಲ್ಲಿ ರೈತರ ಮಹತ್ವದ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ಕಬ್ಬು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳು, ಬೆಲೆ ನಿಗದಿ ಹಾಗೂ ಇತರ ಬೇಡಿಕೆಗಳ ಕುರಿತು ಚರ್ಚೆ ನಡೆಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.








