ಬೀದರ್:- ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಂಬೇಡ್ಕರ್ ವಿರುದ್ಧದ ಹೇಳಿಕೆಗೆ ಬೀದರ್‌ನಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ. ವಿವಿಧ ದಲಿತ ಸಂಘಟನೆಗಳು ಇಂದು ಬೀದರ್ ಬಂದ್‌ಗೆ ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ಬೀದರ್ ತಾಲೂಕಿನ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ.
ಬಂದ್ ಹಿನ್ನೆಲೆ ಅಂಗಡಿ ಮುಗ್ಗಟ್ಟು ಬಂದ್ ಮಾಡಿ ಅಂಗಡಿ ಮಾಲೀಕರು ಬೆಂಬಲ ಸೂಚಿಸಿದ್ದಾರೆ. ಅಷ್ಟೇ ಅಲ್ಲದೇ ಬಹುತೇಕ ಸಾರಿಗೆ ಸಂಚಾರ ಬಂದ್ ಆಗಿದೆ. ಬೆಳಗ್ಗೆ 8 ರಿಂದ ಸಂಜೆ 5 ರವರೆಗೆ ಬೀದರ್ ಬಂದ್‌ಗೆ ಕರೆ ನೀಡಲಾಗಿದೆ. ಬೀದರ್ ನಗರದ ಅಂಬೇಡ್ಕರ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದ್ದು, ಬೃಹತ್ ಬಹಿರಂಗ ಸಮಾವೇಶ ಕೂಡ ನಡೆಯಲಿದೆ. ಬೃಹತ್ ಬಂದ್ ಪ್ರತಿಭಟನೆಯಲ್ಲಿ ಸಾವಿರಾರು ಜನರು ಭಾಗಿಯಾಗಲಿದ್ದಾರೆ.
ಬಂದ್ ಹಿನ್ನೆಲೆ ಇಂದು ಬೀದರ್‌ನಲ್ಲಿ ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಬೀದರ್ ನಗರದ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿ ಪದವಿ ಪೂರ್ವ ಉಪ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.