ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕ್ಷೇತ್ರದಲ್ಲೇ ಅಂಗನವಾಡಿ ಮಕ್ಕಳಿಗೆ ಅವಧಿ ಮೀರಿದ (ಎಕ್ಸ್‌ಪೈರ್ಡ್) ಸಿರಿಧಾನ್ಯ ಲಡ್ಡು ವಿತರಣೆ ಮಾಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಮೂರು ಅಂಗನವಾಡಿ ಕೇಂದ್ರಗಳಿಗೆ ಸಿರಿಧಾನ್ಯ ಆಧಾರಿತ ಪೌಷ್ಟಿಕ ಲಡ್ಡುಗಳನ್ನು ಪೂರೈಕೆ ಮಾಡಲಾಗಿದ್ದು,
ಅವುಗಳಲ್ಲಿ ಕೆಲವು ಪದಾರ್ಥಗಳು ಆರು ತಿಂಗಳ ಹಿಂದೆಯೇ ಅವಧಿ ಮೀರಿರುವುದಾಗಿ ತಿಳಿದುಬಂದಿದೆ. ರಾಜ್ಯದ ಅಂಗನವಾಡಿ ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸುವ ಉದ್ದೇಶದಿಂದ ಮಿಲೆಟ್ ಲಡ್ಡು ವಿತರಣೆ ಮಾಡಲಾಗುತ್ತಿದೆ. ಆದರೆ ಈ ಪೌಷ್ಟಿಕ ಆಹಾರ ವಿತರಣೆಯಲ್ಲೇ ಅಕ್ರಮ ನಡೆದಿದೆ ಎಂಬ ಆರೋಪ ವ್ಯಕ್ತವಾಗಿದೆ.
ಕನ್ನಡ ಹೋರಾಟಗಾರ್ತಿ ಕಸ್ತೂರಿಭಾವಿ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿದ ವೇಳೆ ಅವಧಿ ಮೀರಿದ ಪದಾರ್ಥಗಳು ವಿತರಣೆ ಆಗಿರುವುದು ಬೆಳಕಿಗೆ ಬಂದಿದೆ ಎನ್ನಲಾಗಿದೆ. ಈ ಸಂಬಂಧ ಅವರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಅದು ವೈರಲ್ ಆಗಿದೆ. ವಿಡಿಯೋದಲ್ಲಿ ಹುಳ ಬಿದ್ದ ರವಾ, ಅವಧಿ ಮುಗಿದ ಸಜ್ಜೆ ಲಡ್ಡು ಹಾಗೂ ಸಾಂಬಾರ್ ಪುಡಿ ಕಾಣಿಸುತ್ತಿದೆ ಎಂದು ತಿಳಿದುಬಂದಿದೆ.
2025ರ ಅಕ್ಟೋಬರ್‌ನಲ್ಲಿ ಅವಧಿ ಮುಗಿದ ಮಿಲೆಟ್ ಲಡ್ಡುಗಳನ್ನು ಇದೀಗ ವಿತರಣೆ ಮಾಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳು ಹಾಗೂ ಅಂಗನವಾಡಿ ಸಹಾಯಕಿಯರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಅವಧಿ ಮೀರಿದ ಆಹಾರ ಸೇವನೆಯಿಂದ ಅಜೀರ್ಣ, ವಾಂತಿ-ಭೇದಿ, ಜ್ವರ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳು ಉಂಟಾಗುವ ಸಾಧ್ಯತೆಯಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.



