ವಿಜಯಸಾಕ್ಷಿ ಸುದ್ದಿ, ಧಾರವಾಡ: ಜಿಲ್ಲೆಯಲ್ಲಿ ಕೆಲವು ಶಾಲಾ-ಕಾಲೇಜು ಹಾಗೂ ಅಂಗನವಾಡಿ ಕಟ್ಟಡಗಳು ಶಿಥಿಲಗೊಂಡಿದ್ದು, ಈ ಶಾಲೆಗಳಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಪರ್ಯಾಯ ವ್ಯವಸ್ಥೆ ಮಾಡುವಂತೆ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಎಸ್.ಲಾಡ್ ಸೂಚಿಸಿದ್ದಾರೆ.
ಈ ಸಂಬಂಧ ಧಾರವಾಡ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಧಾರವಾಡದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರು ಹಾಗೂ ಧಾರವಾಡದ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪ ನಿರ್ದೇಶರಿಗೆ ಸಚಿವರು ಪತ್ರ ಬರೆದಿದ್ದಾರೆ.
ಧಾರವಾಡ ಮತ್ತು ಇತರೆ ಪ್ರದೇಶಗಳಲ್ಲಿ ಕೆಲವು ಶಾಲಾ-ಕಾಲೇಜು ಹಾಗೂ ಅಂಗನವಾಡಿ ಕಟ್ಟಡಗಳು ಶಿಥಿಲಗೊಂಡಿರುವುದು ಗಮನಕ್ಕೆ ಬಂದಿದೆ. ಕಲಘಟಗಿ ಕ್ಷೇತ್ರದ ಪ್ರವಾಸದಲ್ಲಿದ್ದಾಗ ಕೊಠಡಿಗಳು ಶಿಥಿಲಗೊಂಡಿರುವುದು ಗಮನಿಸಿದ್ದೇನೆ. ಇಂತಹ ಕೊಠಡಿಗಳು ಮಕ್ಕಳಿಗೆ ಸೂಕ್ತವಲ್ಲ ಎಂದಿರುವ ಅವರು, ಪರ್ಯಾಯ ವ್ಯವಸ್ಥೆ ಮಾಡುವಂತೆ ತಿಳಿಸಿದ್ದಾರೆ.
ಲೋಕೋಪಯೋಗಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ತಾಂತ್ರಿಕ ಅಧಿಕಾರಿಗಳು ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಭೇಟಿ ನೀಡಿ ವಸ್ತುಸ್ಥಿತಿ ಪರಿಶೀಲಿಸಿ ವಿವರ ವರದಿಯೊಂದಿಗೆ ಪೂರ್ಣ ಪ್ರಮಾಣದ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಕಾಲಮಿತಿಯಲ್ಲಿ ಸಲ್ಲಿಸಲು ಸಚಿವರು ಸೂಚಿಸಿದ್ದಾರೆ.