ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಮಿತವ್ಯಯ ಜೀವನಶೈಲಿ, ಇಂಧನ ಉಳಿತಾಯ ಹಾಗೂ ಸಾರ್ವಜನಿಕ ಸಾರಿಗೆ ಬಳಕೆಗೆ ಆದ್ಯತೆ ನೀಡುವಂತೆ ಕರೆ ನೀಡಿದ ಹಿನ್ನೆಲೆಯಲ್ಲಿ, ಕೇಂದ್ರ ಸಚಿವ ವಿ. ಸೋಮಣ್ಣ ಮತ್ತು ಸಂಸದ ಪಿ.ಸಿ. ಮೋಹನ್ ಬೆಂಗಳೂರಿನಲ್ಲಿ ಮೆಟ್ರೋ ಪ್ರಯಾಣ ಮಾಡುವ ಮೂಲಕ ಮಾದರಿಯಾಗಿದ್ದಾರೆ.
ಬೆಂಗಳೂರಿನ ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣದಿಂದ ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣದವರೆಗೆ ಇಬ್ಬರೂ ನಾಯಕರು ಮೆಟ್ರೋದಲ್ಲಿ ಸಂಚರಿಸಿದರು.
ಈ ಕುರಿತು ಮಾತನಾಡಿದ ಅವರು, ಇಂಧನ ಉಳಿತಾಯ, ನಗರ ಸಂಚಾರ ದಟ್ಟಣೆ ಕಡಿಮೆ ಮಾಡುವುದು ಹಾಗೂ ಸಾರ್ವಜನಿಕ ಸಾರಿಗೆ ಬಳಕೆಯನ್ನು ಉತ್ತೇಜಿಸುವ ಉದ್ದೇಶದಿಂದ ಈ ಪ್ರಯಾಣ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಮೆಟ್ರೋ ಪ್ರಯಾಣದ ಬಳಿಕ ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣದಿಂದ ರೈಲ್ವೇ ನಿಲ್ದಾಣದವರೆಗೆ ಕೇಂದ್ರ ಸಚಿವ ಸೋಮಣ್ಣ ಮತ್ತು ಸಂಸದ ಪಿ.ಸಿ. ಮೋಹನ್ ಇವಿ ಬೈಕ್‌ನಲ್ಲಿ ಪ್ರಯಾಣಿಸಿದರು.
ಪ್ರಧಾನಿಯವರ ಮಿತವ್ಯಯ ಸಂದೇಶವನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಬಿಜೆಪಿ ನಾಯಕರು ವಿವಿಧ ರಾಜ್ಯಗಳಲ್ಲಿ ಸಾರ್ವಜನಿಕ ಸಾರಿಗೆ ಬಳಕೆ, ವಿದ್ಯುತ್ ಚಾಲಿತ ವಾಹನಗಳ ಪ್ರಚಾರ ಹಾಗೂ ಇಂಧನ ಉಳಿತಾಯದ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ.
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧ ಪರಿಸ್ಥಿತಿಯಿಂದ ಜಾಗತಿಕ ಇಂಧನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಮಿತವ್ಯಯ ಜೀವನಶೈಲಿಯನ್ನು ಅನುಸರಿಸುವಂತೆ ಕರೆ ನೀಡಿದ್ದಾರೆ.
ಯುದ್ಧದ ಪರಿಣಾಮ ತೈಲದರ ಏರಿಕೆಯಾಗುತ್ತಿರುವುದರಿಂದ ಸಾಧ್ಯವಾದಷ್ಟು ಸಾರ್ವಜನಿಕ ಸಾರಿಗೆ ಬಳಸುವುದು, ಇಂಧನ ವ್ಯರ್ಥವಾಗದಂತೆ ನೋಡಿಕೊಳ್ಳುವುದು ಹಾಗೂ ಅನಗತ್ಯ ಖರ್ಚುಗಳನ್ನು ಕಡಿಮೆ ಮಾಡುವುದು ಪ್ರತಿಯೊಬ್ಬ ನಾಗರಿಕನ ಹೊಣೆಗಾರಿಕೆ ಎಂದು ಪ್ರಧಾನಿ ತಿಳಿಸಿದ್ದಾರೆ.



