ಕಲಬುರ್ಗಿ:- ಅಪ್ರಾಪ್ತೆ ಮೇಲಿನ ಹತ್ಯೆ ಹಾಗೂ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಆರೋಪಿಗೆ ಶಿಕ್ಷೆ ಪ್ರಕಟಿಸಿ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್ ಕೋರ್ಟ್ ಆದೇಶ ಹೊರಡಿಸಿದೆ. ಶಿಕ್ಷೆ ಪ್ರಕಾರ ಆರೋಪಿಗೆ, ಗಲ್ಲು ಶಿಕ್ಷೆ ಜೊತೆಗೆ 1 ಲಕ್ಷ ರೂ. ದಂಡ ವಿಧಿಸಲಾಗಿದೆ.
ಗುಂಡೇರಾವ ಚೋಪಡೆ (28) ಶಿಕ್ಷೆಗೆ ಒಳಗಾದ ಆರೋಪಿ. 2023ರ ಜು.15ರಂದು ಆಳಂದ ತಾಲ್ಲೂಕಿನ ಗ್ರಾಮವೊಂದರ ಬಾಲಕಿ ಪುಸ್ತಕವೊಂದನ್ನು ತರಲು ಮತ್ತೊಂದು ಗ್ರಾಮಕ್ಕೆ ನಡೆದುಕೊಂಡು ಹೋಗುತ್ತಿದ್ದಳು. ಈ ವೇಳೆ ಅಪರಾಧಿ ಗುಂಡೇರಾವ ಬಾಲಕಿಯನ್ನು ಬಲವಂತವಾಗಿ ಕಬ್ಬಿನ ಗದ್ದೆಗೆ ಎಳೆದೊಯ್ದು ಅತ್ಯಾಚಾರ ಎಸಗಿದ್ದ. ಬಳಿಕ ಉಸಿರುಗಟ್ಟಿಸಿ ಸಾಯಿಸಿ, ಪಕ್ಕದ ಹೊಲದಲ್ಲಿದ್ದ ಬಾವಿಯೊಂದರಲ್ಲಿ ಶವವನ್ನು ಬೀಸಾಡಿ ಹೋಗಿದ್ದ. ಈ ಕುರಿತು ಆಳಂದ ತಾಲ್ಲೂಕಿನ ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ತನಿಖಾಧಿಕಾರಿ ಭಾಸು ಚವ್ಹಾಣ ನೇತೃತ್ವದಲ್ಲಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಯಮನಪ್ಪ ಬಮ್ಮಣಗಿ ಅವರು ಪೋಕ್ಸೊ ಕಾಯ್ದೆಯಡಿ ಆರೋಪಿಗೆ ಗಲ್ಲು ಶಿಕ್ಷೆ ಹಾಗೂ 1 ಲಕ್ಷ ರೂ. ದಂಡ ವಿಧಿಸಿ, ಆದೇಶ ಹೊರಡಿಸಿದ್ದಾರೆ. ಅಲ್ಲದೆ, ಕಾನೂನು ಪ್ರಾಧಿಕಾರದ ವತಿಯಿಂದ 4 ಲಕ್ಷ ರೂ. ಪರಿಹಾರವನ್ನು ಮೃತ ಬಾಲಕಿಯ ತಾಯಿಗೆ ನೀಡಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.