ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ವಸತಿ ಶಾಲೆಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಬೇಕು ಮತ್ತು ನಿರ್ಲಕ್ಷ್ಯಕ್ಕೊಳಗಾದ ಗ್ರಾಮೀಣ ಭಾಗದ ಕುಡಿಯುವ ನೀರಿನ ವ್ಯವಸ್ಥೆ, ಶಿಕ್ಷಣ, ಆರೋಗ್ಯ, ಆಡಳಿತ ವ್ಯವಸ್ಥೆ ಸರಿಪಡಿಸಬೇಕು ಎಂಬಿತ್ಯಾದಿ ಕ್ಷೇತ್ರದ ಅಭಿವೃದ್ಧಿ ಕುರಿತು ಬೆಳಗಾವಿಯ ಅಧಿವೇಶನದಲ್ಲಿ ಶಾಸಕ ಡಾ. ಚಂದ್ರು ಲಮಾಣಿ ಸರ್ಕಾರದ ಗಮನ ಸೆಳೆದರು.
ಶಿರಹಟ್ಟಿ ಮತಕ್ಷೇತ್ರದಲ್ಲಿ ಬರುವ ವಸತಿ ಶಾಲೆಗಳ ವಿದ್ಯಾರ್ಥಿಗಳಿಗೆ ಈ ಶೈಕ್ಷಣಿಕ ವರ್ಷ ಮುಗಿಯುತ್ತಾ ಬಂದರೂ ನೀಡಬೇಕಾದ ಸಾಮಗ್ರಿಗಳನ್ನು ಒದಗಿಸಿಲ್ಲ. ವಸತಿ ಶಾಲೆಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳು ಕಾರ್ಯ ನಿರ್ವಹಿಸುತ್ತಿಲ್ಲ. ಡೆಸ್ಕ್, ಬೆಡ್, ಪ್ರಯೋಗಾಲಯ ಸಾಮಗ್ರಿಗಳು, ನರ್ಸಿಂಗ್ ಕಿಟ್ ಪೂರೈಕೆಯಾಗಿಲ್ಲ. 5 ವಸತಿ ಶಾಲೆಗಳ ಪೈಕಿ ಎರಡು ವಿದ್ಯಾರ್ಥಿನಿಯರ ವಸತಿ ಶಾಲೆಗಳಿದ್ದು, ಅಲ್ಲಿ ಸುತ್ತಲೂ ಕಾಂಪೌಂಡ್ ವ್ಯವಸ್ಥೆ ಇಲ್ಲ. ಮುಂಡರಗಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ ಬಾಡಿಗೆ ಕಟ್ಟಡದಲ್ಲಿದೆ. ಅಲ್ಲಿ ಸಾಕಷ್ಟು ಸಮಸ್ಯೆಗಳಿದ್ದು, ಭದ್ರತೆ ಇಲ್ಲ. ಕೂಡಲೇ ಸ್ಥಳಾಂತರ ಮಾಡಿ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಈ ವೇಳೆ ಸಮಾಜ ಕಲ್ಯಾಣ ಸಚಿವ ಮಹಾದೇವಪ್ಪ ಶಾಸಕರ ಪ್ರಶ್ನೆಗೆ ಉತ್ತರಿಸಿ, ಈ ಕುರಿತಂತೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
2023–24ರಲ್ಲಿ ಲಕ್ಷ್ಮೇಶ್ವರ ತಾಲೂಕಿನ ಆದರಹಳ್ಳಿ ಸೇರಿದಂತೆ 37 ಗ್ರಾಮಗಳಿಗೆ ಕುಡಿಯುವ ನೀರನ್ನು ಒದಗಿಸುವ ಬಹುಗ್ರಾಮ ಯೋಜನೆಯ ಕಾಮಗಾರಿಯನ್ನು ತ್ವರಿತಗೊಳಿಸಿ ಜನರ ನೀರಿನ ಸಮಸ್ಯೆ ಬಗೆಹರಿಸಬೇಕು ಎಂದು ಸಚಿವರು ಹಾಗೂ ಅಧಿಕಾರಿಗಳಿಗೆ ಮನವಿ ಮಾಡಿದರೂ ಸ್ಪಂದನೆ ಸಿಕ್ಕಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಪಂಚಾಯತ್‌ರಾಜ್ ಇಲಾಖೆಯ ಬಗ್ಗೆ ಬೇಸರ ವ್ಯಕ್ತಪಡಿಸಿ ಕೂಡಲೇ ಇದರ ಬಗ್ಗೆ ಗಮನ ಹರಿಸುವಂತೆ ಆಗ್ರಹಿಸಿದರು.



