HomeGadag Newsಎಮ್‌ಎಲ್‌ಸಿ ಚುನಾವಣೆಯಲ್ಲಿ ಅಕ್ರಮ ಕಂಡರೆ ತಕ್ಷಣ ಕ್ರಮ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಸೂಚನೆ

ಎಮ್‌ಎಲ್‌ಸಿ ಚುನಾವಣೆಯಲ್ಲಿ ಅಕ್ರಮ ಕಂಡರೆ ತಕ್ಷಣ ಕ್ರಮ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಸೂಚನೆ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ

ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ-2026ರ ಪ್ರಕ್ರಿಯೆ ಮುಕ್ತ, ನ್ಯಾಯಸಮ್ಮತ ಹಾಗೂ ಪಾರದರ್ಶಕವಾಗಿ ನಡೆಯುವಂತೆ ಅಧಿಕಾರಿಗಳು ಅತ್ಯಂತ ಎಚ್ಚರಿಕೆ, ಜವಾಬ್ದಾರಿ ಮತ್ತು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಹೇಳಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಭಾರತ ಚುನಾವಣಾ ಆಯೋಗ ಹಾಗೂ ಗದಗ ಜಿಲ್ಲಾಡಳಿತದ ವತಿಯಿಂದ ಬುಧವಾರ ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿಗಳು, ಫ್ಲೈಯಿಂಗ್ ಸ್ಕ್ವಾಡ್ ಟೀಮ್, ವೀಡಿಯೋ ಸರ್ವೆಲೆನ್ಸ್ ಟೀಮ್ ಹಾಗೂ ವೀಡಿಯೋ ವೀವಿಂಗ್ ಟೀಮ್‌ಗಳಿಗೆ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಚುನಾವಣಾ ಆಯೋಗದ ಮಾರ್ಗಸೂಚಿ ಹಾಗೂ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಅಧಿಕಾರಿಗಳ ಪ್ರಮುಖ ಜವಾಬ್ದಾರಿಯಾಗಿದೆ. ಮತದಾರರಿಗೆ ಆಮಿಷವೊಡ್ಡುವುದು, ಅನುಮತಿ ಇಲ್ಲದೆ ಪ್ರಚಾರ ನಡೆಸುವುದು ಸೇರಿದಂತೆ ಯಾವುದೇ ನಿಯಮಬಾಹಿರ ಚಟುವಟಿಕೆ ಕಂಡುಬಂದರೆ ನಿರ್ಲಕ್ಷ್ಯ ತೋರದೆ ಸೂಕ್ತ ದಾಖಲೆಗಳೊಂದಿಗೆ ವರದಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಎಫ್‌ಎಸ್‌ಟಿ ತಂಡಗಳು ತಮ್ಮ ವ್ಯಾಪ್ತಿಯಲ್ಲಿನ ಚುನಾವಣಾ ಚಟುವಟಿಕೆಗಳ ಮೇಲೆ ನಿರಂತರ ನಿಗಾ ವಹಿಸಬೇಕು. ಉಲ್ಲಂಘನೆ ಕಂಡುಬಂದಲ್ಲಿ ತಕ್ಷಣ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ, ಅಗತ್ಯವಿದ್ದರೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಮುಂದಿನ ಕ್ರಮ ಕೈಗೊಳ್ಳಬೇಕು ಎಂದರು.

ವಿ‌ಎಸ್‌ಟಿ ಹಾಗೂ ವಿ‌ವಿ‌ಟಿ ತಂಡಗಳು ಚುನಾವಣಾ ಪ್ರಚಾರ ಸೇರಿದಂತೆ ಸಂಬಂಧಿತ ಚಟುವಟಿಕೆಗಳನ್ನು ನಿಯಮಾನುಸಾರ ವೀಡಿಯೋ ದಾಖಲಿಸಬೇಕು. ದಾಖಲಿಸಿದ ಮಾಹಿತಿಯನ್ನು ಸುರಕ್ಷಿತವಾಗಿ ಸಂರಕ್ಷಿಸಿ, ಅಗತ್ಯ ಸಂದರ್ಭದಲ್ಲಿ ಪರಿಶೀಲನೆ ಹಾಗೂ ವರದಿ ತಯಾರಿಕೆಗೆ ಲಭ್ಯವಾಗುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಎಫ್‌ಎಸ್‌ಟಿ ಮತ್ತು ವಿ‌ಎಸ್‌ಟಿ ತಂಡಗಳು ತಮ್ಮ ವ್ಯಾಪ್ತಿಯ ಚಟುವಟಿಕೆಗಳ ಕುರಿತು ಪ್ರತಿದಿನ ನಿಗದಿತ ಸಮಯದಲ್ಲಿ ಜಿಲ್ಲಾ ಚುನಾವಣಾ ಶಾಖೆಗೆ ಸಮಗ್ರ ವರದಿ ಸಲ್ಲಿಸಬೇಕು. ವರದಿ ಸಲ್ಲಿಕೆಯಲ್ಲಿ ವಿಳಂಬ ಅಥವಾ ನಿರ್ಲಕ್ಷ್ಯಕ್ಕೆ ಅವಕಾಶ ನೀಡಬಾರದು ಎಂದು ಹೇಳಿದರು.

ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಪ್ರತಿಯೊಬ್ಬ ಅಧಿಕಾರಿ ಮತ್ತು ಸಿಬ್ಬಂದಿಯ ಪಾತ್ರವೂ ಮಹತ್ವದ್ದಾಗಿದೆ. ಒಂದು ತಂಡದ ಕಾರ್ಯನಿರ್ವಹಣೆಯಲ್ಲಿನ ಲೋಪವೂ ಚುನಾವಣಾ ಪ್ರಕ್ರಿಯೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಎಲ್ಲರೂ ಪರಸ್ಪರ ಸಮನ್ವಯ ಮತ್ತು ಸಹಕಾರದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರಗೆಶ್ ಕೆ.ಆರ್., ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಸಿ.ಆರ್. ಮುಂಡರಗಿ, ಉಪವಿಭಾಗಾಧಿಕಾರಿ ಗಂಗಪ್ಪ ಎಂ., ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಡಾ. ನಂದಾ ಹಣಬರಟ್ಟಿ, ಡಿವೈಎಸ್ಪಿ ಮಹಾಂತೇಶ್ ಸಜ್ಜನ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಚುನಾವಣಾ ಕರ್ತವ್ಯದಲ್ಲಿ ಯಾವುದೇ ವ್ಯಕ್ತಿ, ಸಂಘಟನೆ ಅಥವಾ ರಾಜಕೀಯ ಪಕ್ಷದ ಪರ ಅಥವಾ ವಿರುದ್ಧವಾಗಿ ವರ್ತಿಸದೆ ಸಂಪೂರ್ಣ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕು. ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಕಂಡುಬಂದರೆ ತಕ್ಷಣ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು, ನಿಯಮಾನುಸಾರ ಅಗತ್ಯ ಕ್ರಮ ಕೈಗೊಳ್ಳಬೇಕು.
— ಸಿ.ಎನ್. ಶ್ರೀಧರ್, ಜಿಲ್ಲಾಧಿಕಾರಿ, ಗದಗ

 

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img