ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಜೈಲು ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ಪ್ರಕರಣದಲ್ಲಿ ಜೈಲು ಅಧಿಕಾರಿಗಳ ಕೈವಾಡವೂ ಇರಬಹುದು ಎಂಬ ಅನುಮಾನ ವ್ಯಕ್ತಪಡಿಸಿರುವ ಅವರು, ಈ ಬಗ್ಗೆ ತನಿಖೆ ನಡೆಯುತ್ತಿದ್ದು, ಮೊಬೈಲ್ ಯಾರ ಮೂಲಕ ಜೈಲಿನೊಳಗೆ ತಲುಪಿತು ಎಂಬುದು ತನಿಖೆಯಿಂದ ಬಹಿರಂಗವಾಗಲಿದೆ ಎಂದು ಹೇಳಿದ್ದಾರೆ.
ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆಯಾಗಿರುವುದಕ್ಕೆ ಸಂಬಂಧಿಸಿದ ವೀಡಿಯೋ 2025ರ ಡಿಸೆಂಬರ್‌ನ ಹಳೆಯ ವೀಡಿಯೋ. ಪ್ರಜ್ವಲ್ ರೇವಣ್ಣ ಸೆಲ್ ಮೇಲೆ ಮಾತ್ರ ರೇಡ್ ಮಾಡ್ಸಿಲ್ಲ, ಇಡೀ ಜೈಲಿನ ಮೇಲೆ ದಾಳಿ ಮಾಡಿದ್ದೆವು. ತನಿಖೆ ಆಗುತ್ತಿದೆ, ಯಾರು ಕೊಟ್ರು ಅನ್ನೋದು ಬಯಲಿಗೆ ಬರಲಿದೆ. ಇದರಲ್ಲಿ ನಮ್ಮ ಅಧಿಕಾರಿಗಳ ಕೈವಾಡವೂ ಇದೆ. ಬೇಲಿಯೇ ಎದ್ದು ಹೊಲ ಮೇಯ್ದರೆ ಹೇಗೆ ಎಂದು ಪ್ರಶ್ನಿಸಿದರು.
ಜೈಲಿನಲ್ಲಿ ಕೈದಿಗಳಿಗೆ ಮೊಬೈಲ್ ಸೇರಿದಂತೆ ನಿಷೇಧಿತ ವಸ್ತುಗಳು ತಲುಪದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಪ್ರಕರಣದಲ್ಲಿ ಯಾರೇ ತಪ್ಪಿತಸ್ಥರಾಗಿದ್ದರೂ ತನಿಖೆಯ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಜೈಲುಗಳ ಭದ್ರತೆಯನ್ನು ಮತ್ತಷ್ಟು ಬಲಪಡಿಸಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ಜೈಲುಗಳಲ್ಲಿ ಭದ್ರತಾ ವ್ಯವಸ್ಥೆ ಸುಧಾರಿಸಲು ಈಗಾಗಲೇ ಸುಮಾರು ₹20 ಕೋಟಿ ವೆಚ್ಚದಲ್ಲಿ ಎಐ ಆಧಾರಿತ ಕ್ಯಾಮೆರಾಗಳನ್ನು ಪಡೆಯಲಾಗಿದೆ. ಮುಂದಿನ ಹಂತದಲ್ಲಿ ಜೈಲುಗಳಲ್ಲಿ ಎಐ ಕ್ಯಾಮೆರಾಗಳನ್ನು ಅಳವಡಿಸಲಾಗುವುದು ಎಂದು ಹೇಳಿದರು.
ಜೈಲು ವ್ಯವಸ್ಥೆಯಲ್ಲೇ ಕೆಲವು ನ್ಯೂನ್ಯತೆಗಳಿರುವುದು ಗಮನಕ್ಕೆ ಬಂದಿದೆ. ಅವುಗಳನ್ನು ಸರಿಪಡಿಸುವ ಕೆಲಸ ನಡೆಯಲಿದೆ. ಕೆಲವರಿಗೆ ಜೈಲಿನಲ್ಲಿ ವಿಐಪಿ ಟ್ರೀಟ್‌ಮೆಂಟ್ ಸಿಕ್ಕಿರುವ ಆರೋಪಗಳೂ ಕೇಳಿಬಂದಿವೆ. ಇಂತಹ ವ್ಯವಸ್ಥೆಗೆ ಅವಕಾಶ ನೀಡದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವರು ಹೇಳಿದರು.



