ಬೆಂಗಳೂರು: ರಾಜ್ಯದಲ್ಲಿ ಕಳೆದ ಹಲವು ದಿನಗಳಿಂದ ಅಬ್ಬರಿಸುತ್ತಿದ್ದ ಮಳೆಗೆ ಇದೀಗ ಸ್ವಲ್ಪ ವಿರಾಮ ದೊರಕಿದೆ. ಇಂದು ಕರಾವಳಿ ಜಿಲ್ಲೆಗಳಲ್ಲಿ ಮಾತ್ರ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಉಳಿದ ಭಾಗಗಳಲ್ಲಿ ಒಣ ಹವಾಮಾನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡದಲ್ಲಿ ಸಣ್ಣ ಪ್ರಮಾಣದ ಮಳೆ ಬೀಳುವ ನಿರೀಕ್ಷೆ ಇದೆ.
ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಸಂಪೂರ್ಣವಾಗಿ ಒಣ ಹವಾಮಾನ ಇರಲಿದೆ.
ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಮಳೆ ಸಾಧ್ಯತೆ ಬಹಳ ಕಡಿಮೆ ಇದೆ.
ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ತಾಪಮಾನ 27°C ಹಾಗೂ ಕನಿಷ್ಠ ತಾಪಮಾನ 19°C ಇರಲಿದೆ. ಗಾಳಿಯ ವೇಗ ಗಂಟೆಗೆ 22–24 ಕಿ.ಮೀ. ಇರಬಹುದು.
ರಾಜ್ಯಾದ್ಯಂತ ಮುಂದಿನ ಕೆಲವು ದಿನಗಳು ಒಣಹವೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.



