ನವದೆಹಲಿ: ನರೇಂದ್ರ ಮೋದಿ ಅವರ ಜನಪ್ರಿಯತೆ ಇದೀಗ ಮತ್ತೊಂದು ದಾಖಲೆ ನಿರ್ಮಿಸಿದೆ. ಇನ್ಸ್ಟಾಗ್ರಾಂನಲ್ಲಿ 100 ಮಿಲಿಯನ್ ಫಾಲೋವರ್ಸ್ ಗಳಿಸುವ ಮೂಲಕ ಅವರು ವಿಶ್ವದ ಮೊದಲ ನಾಯಕ ಮತ್ತು ರಾಜಕಾರಣಿಯಾಗಿ ಐತಿಹಾಸಿಕ ಮೈಲಿಗಲ್ಲು ತಲುಪಿದ್ದಾರೆ.
2014ರಲ್ಲಿ ಮೆಟಾ ವೇದಿಕೆಯಾದ ಇನ್ಸ್ಟಾಗ್ರಾಂನಲ್ಲಿ ಖಾತೆ ತೆರೆದ ಪ್ರಧಾನಿ ಮೋದಿ, ಇದೀಗ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಹಿಂದಿಕ್ಕಿದ್ದಾರೆ. ಟ್ರಂಪ್ 43.2 ಮಿಲಿಯನ್ ಫಾಲೋವರ್ಸ್ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.
ಇಂಡೋನೇಷ್ಯಾ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ 15 ಮಿಲಿಯನ್ ಫಾಲೋವರ್ಸ್ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. ಬ್ರೆಜಿಲ್ ಅಧ್ಯಕ್ಷ ಲೂಲಾ ಡಾ ಸಿಲ್ವಾ 14.4 ಮಿಲಿಯನ್ ಫಾಲೋವರ್ಸ್ಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ. ಟರ್ಕಿಯ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೋಗನ್ 11.6 ಮಿಲಿಯನ್ ಫಾಲೋವರ್ಸ್ಗಳೊಂದಿಗೆ ಐದನೇ ಸ್ಥಾನದಲ್ಲಿದ್ದು, ಅರ್ಜೆಂಟೀನಾ ಅಧ್ಯಕ್ಷ ಜೇವಿಯರ್ ಮೈಲಿ 6.4 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ.
ಭಾರತದೊಳಗೆ ಪ್ರಧಾನಿ ಮೋದಿ ನಂತರ ಅತಿ ಹೆಚ್ಚು ಫಾಲೋವರ್ಸ್ ಹೊಂದಿರುವವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (16.1 ಮಿಲಿಯನ್). ಕಾಂಗ್ರೆಸ್ ಸಂಸದ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸುಮಾರು 12.6 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ.



