ನವದೆಹಲಿ: ದೇಶಾದ್ಯಂತ ಉದ್ಯೋಗಾಕಾಂಕ್ಷಿಗಳ ಗಮನ ಸೆಳೆದಿರುವ 19ನೇ ಆವೃತ್ತಿಯ ರೋಜ್‌ಗಾರ್ ಮೇಳ ಇಂದು ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ 51,000ಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರ ವಿತರಿಸಲಿದ್ದಾರೆ.
ಬೆಳಗ್ಗೆ 11 ಗಂಟೆಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಆರಂಭವಾಗಲಿರುವ ಈ ಉದ್ಯೋಗ ಮೇಳ ದೇಶದ 42 ಕೇಂದ್ರಗಳಲ್ಲಿ ಏಕಕಾಲದಲ್ಲಿ ನಡೆಯಲಿದೆ. ವಿವಿಧ ಸರ್ಕಾರಿ ಇಲಾಖೆ ಹಾಗೂ ಸಂಸ್ಥೆಗಳಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರಧಾನಿ ಮೋದಿ ನೇರವಾಗಿ ನೇಮಕಾತಿ ಪತ್ರ ಹಸ್ತಾಂತರಿಸಲಿದ್ದಾರೆ.
ರೈಲ್ವೇ, ಗೃಹ ವ್ಯವಹಾರಗಳು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಹಣಕಾಸು ಸೇವೆಗಳು, ಉನ್ನತ ಶಿಕ್ಷಣ ಸೇರಿದಂತೆ ಹಲವು ಪ್ರಮುಖ ಸಚಿವಾಲಯಗಳು ಮತ್ತು ಇಲಾಖೆಗಳ ಹುದ್ದೆಗಳಿಗೆ ಯುವಕರು ನೇಮಕಗೊಳ್ಳಲಿದ್ದಾರೆ.
ಪ್ರಧಾನಮಂತ್ರಿ ಕಚೇರಿ ಮಾಹಿತಿ ಪ್ರಕಾರ, ಈವರೆಗೆ ನಡೆದಿರುವ 18 ರೋಜ್‌ಗಾರ್ ಮೇಳಗಳ ಮೂಲಕ ಸುಮಾರು 12 ಲಕ್ಷಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಲಾಗಿದೆ. ಉದ್ಯೋಗ ಸೃಷ್ಟಿಗೆ ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿರುವುದರ ಭಾಗವಾಗಿ ಈ ಕಾರ್ಯಕ್ರಮವನ್ನು ಮುಂದುವರಿಸಲಾಗುತ್ತಿದೆ.
ಈ ಕುರಿತು ಪ್ರಧಾನಿ ಮೋದಿ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದು, “ಯುವಕರ ಸಬಲೀಕರಣ ಮತ್ತು ಅವರ ಉಜ್ವಲ ಭವಿಷ್ಯಕ್ಕಾಗಿ ನಾವು ಬದ್ಧರಾಗಿದ್ದೇವೆ” ಎಂದು ತಿಳಿಸಿದ್ದಾರೆ.



